

ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ಕುರಿತಂತೆ ಆದೇಶ ನೀಡಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಸಲ್ಲಿಸಲಾಗಿದ್ದ ಆರೋಪ ಪಟ್ಟಿಯ ಆಂಗ್ಲ ಭಾಷೆಯ ಅನುವಾದಿತ ಪ್ರತಿಗಳನ್ನು ಒದಗಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಪ್ರಕರಣದ ಆರೋಪಿಗಳಾದ ರಹಮತುಲ್ಲಾ ಮತ್ತು ಜಮಾಲ್ ಮೊಹಮ್ಮದ್ ಉಸ್ಮಾನ್ ತಮ್ಮ ವಿರುದ್ಧ ಸಲ್ಲಿಕೆಯಾಗಿರುವ ಆರೋಪಪಟ್ಟಿಯನ್ನು ಆಂಗ್ಲಭಾಷೆಯಲ್ಲಿ ಒದಗಿಸಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಈ ಸೂಚನೆ ನೀಡಿ ಅರ್ಜಿಯನ್ನು ಇತ್ಯರ್ಥ ಪಡಿಸಿ ಆದೇಶಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ವೇಲನ್, ತಮ್ಮ ಕಕ್ಷಿದಾರರಿಗೆ ಕನ್ನಡ ಭಾಷೆ ತಿಳಿದಿಲ್ಲ. ಹೀಗಾಗಿ ಆಂಗ್ಲ ಭಾಷೆಯಲ್ಲಿ ಪ್ರತಿ ಒದಗಿಸಬೇಕು ಎಂದು ನ್ಯಾಯಪೀಠಕ್ಕೆ ಕೋರಿದರು. ವಕೀಲರಾಗಿರುವ ತಾನು ಕೂಡ ಕನ್ನಡ ಭಾಷೆಯನ್ನು ಕೇವಲ ಮಾತನಾಡುತ್ತೇನೆ. ಆದರೆ, ಕನ್ನಡದಲ್ಲಿ ಓದಲು ಮತ್ತು ಬರೆಯಲು ಬರುವುದಿಲ್ಲ ಎಂದು ತಿಳಿಸಿದ್ದರು. ಅಲ್ಲದೆ, ಪ್ರಕರಣದಲ್ಲಿ ಅಗತ್ಯವಿದ್ದರೆ ಮತ್ತು ಆರೋಪಿಗಳ ವಿರುದ್ಧದ ಆರೋಪ ಪಟ್ಟಿಯಲ್ಲಿ ಹೇಳಲಾದ ಭಾಷೆಯನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಸಾಬೀತಾದಲ್ಲಿ ಅನುವಾದಿತ ಪ್ರತಿಯನ್ನು ಒದಗಿಸುವುದು ಅಗತ್ಯವಾಗುತ್ತದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.