

ಪುಣೆ: ನಗರದ ಸ್ವಾರ್ಗೇಟ್ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಾಗಿ ಪೊಲೀಸರು ಹುಡುಕಾಟ ತೀವ್ರಗೊಳಿಸಿದ್ದು, ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಒಆಯಿ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ.
ಆರೋಪಿ ದತ್ತಾತ್ರೇಯ ರಾಮದಾಸ್ನನ್ನು ಹುಡುಕಲು ಪೊಲೀಸರು 13 ತಂಡಗಳನ್ನು ರಚಿಸಿದ್ದು, ಆತ ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದ್ದು, ಯಾವುದೋ ಪ್ರಕರಣದಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ಪ್ರಕರಣದ ಬಳಿಕ ಆತ ವೇಷ ಬದಲಾಯಿಸಿದ್ದಾನೆ ಎಂಬ ಮಾತು ಕೇಳಿ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವೊಂದು ದೊರಕಿದೆ.
ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ಆರೋಪಿಯು ತನ್ನ ಸ್ವಗ್ರಾಮದ ಕಬ್ಬಿನ ತೋಟವೊಂದರಲ್ಲಿ ಅಡಗಿಕೊಂಡಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಆರೋಪಿಯನ್ನು ಪತ್ತೆಹಚ್ಚಲು ಡ್ರೋನ್ ಹಾಗೂ ಶ್ವಾನಗಳನ್ನು ಬಳಸಲಾಗಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಫೆಬ್ರವರಿ 26ರ ಬೆಳಗಿನ ಜಾವ 5.45 ರ ಸುಮಾರಿಗೆ ಪಕ್ಕದ ಸತಾರ ಜಿಲ್ಲೆಯ ಫಾಲ್ಟನ್‌ಗೆ ಹೋಗುವ ಬಸ್‌ಗಾಗಿ ಒಂದು ಪ್ಲಾಟ್‌ಫಾರ್ಮ್‌ನಲ್ಲಿ ಮಹಿಳೆಯೊಬ್ಬರು ಕಾಯುತ್ತಿದ್ದಾಗ, ಒಬ್ಬ ವ್ಯಕ್ತಿ ಹತ್ತಿರ ಬಂದು ಅವಳನ್ನು ಅಕ್ಕಾ ಎಂದು ಕರೆದು ಮಾತನಾಡಲು ಶುರು ಮಾಡಿದ್ದ, ಆರೋಪಿಯು ತಾನು ಬಸ್ನ ನಿರ್ವಾಹಕ ಎಂದು ಹೇಳಿ ಸತಾರಕ್ಕೆ ಹೋಗುವ ಬಸ್ ಮತ್ತೊಂದು ಪ್ಲಾಟ್‌ಫಾರ್ಮ್‌ಗೆ ಬಂದಿದೆ ಎಂದು ಹೇಳಿ ಆಕೆಯನ್ನು ಖಾಲಿ ಬಸ್ನೊಳಗೆ ಆರೋಪಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ.
ಘಟನೆಯು ಮಹಾರಾಷ್ಟ್ರ ಸೇರಿದಂತೆ ದೇಶಾದ್ಯಂತ ವ್ಯಾಪಕ ಖಂಡನೆಗೆ ಗುರಿಯಾಗಿತ್ತು. ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಹೇಳಿಕೆ ಆಧರಿಸಿ ಪೊಲೀಸರು ಆರೋಪಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ಆತನ ಸುಳಿವೂ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನವನ್ನ ಘೋಷಿಸಿದ್ದು, ಶೀಘ್ರದಲ್ಲೇ ಬಂಧಿಸುವುದಾಗಿ ತಿಳಿಸಿದ್ದಾರೆ.