ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಸೆರೆ

Published on

ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ(೩೨)ಯನ್ನು ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಸಮಾಜದ ಸಾಮರಸ್ಯ ಕದಡಿದ ಆರೋಪ, ಸಮಾಜ ವಿರೋಧಿ ಕೃತ್ಯಗಳು, ಅಪರಾಧ ಚಟುವಟಿಕೆಗಳನ್ನು ಆಧರಿಸಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮೂಲತಃ ಹಾಸನ ಜಿಲ್ಲೆ ಆಲೂರು ತಾಲೂಕಿನ ಕೆರೆಹಳ್ಳಿಯ ಪುನೀತ್, ಬೆಂಗಳೂರಿನ ಜೆ.ಪಿ.ನಗರ ಏಳನೇ ಹಂತದಲ್ಲಿ ವಾಸವಾಗಿದ್ದ. ರಾಷ್ಟ್ರ ರಕ್ಷಣಾ ಪಡೆ ಎಂಬ ಅನಧಿಕೃತ ಸಂಘಟನೆ ಕಟ್ಟಿಕೊಂಡು ಜನರನ್ನು ಬೆದರಿಸುವ, ಸಮಾಜದ ಶಾಂತಿ ಕದಡುವ, ಗೋ ರಕ್ಷಣೆ ಹೆಸರಿನಲ್ಲಿ ವ್ಯಾಪಾರಿಗಳನ್ನು ಬೆದರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಅಪರಾಧ ಹಿನ್ನೆಲೆಯುಳ್ಳ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ, ಎಲೆಕ್ಟ್ರಾನಿಕ್‌ಸಿಟಿ, ಡಿ.ಜೆ.ಹಳ್ಳಿ, ಬೇಗೂರು ಸೇರಿ ವಿವಿದೆಡೆ ೧೦ ಪ್ರಕರಣ ದಾಖಲಾಗಿವೆ. ಹೀಗಾಗಿ, ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಪಟ್ಟಿ ತೆರೆಯಲು ಕಳೆದೊಂದು ತಿಂಗಳಿನಿಂದ ಸಿದ್ಧತೆ ನಡೆಸಿದ್ದರು. ಈ ಸಂಬಂಧ ಚಿಕ್ಕಪೇಟೆ ಉಪ ವಿಭಾಗದ ಎಸಿಪಿಯು ಪುನೀತ್‌ಗೆ ತಿಳಿವಳಿಕೆಯ ನೋಟಿಸ್ ಜಾರಿ ಮಾಡಿದ್ದರು. ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಪಟ್ಟಿ ತೆರೆಯಲು ಅನುಮತಿ ಕೋರಿ ಚಾಮರಾಜಪೇಟೆ ಠಾಣೆ ಇನ್‌ಸ್ಪೆಕ್ಟರ್ ವರದಿ ಸಲ್ಲಿಸಿದ್ದರು. ಹಲವು ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ತಮ್ಮನ್ನು ಏಕೆ ರೌಡಿಪಟ್ಟಿಗೆ ಸೇರಿಸಬಾರದು ಎಂಬುದಕ್ಕೆ ವಿವರಣೆ ಸಲ್ಲಿಸಬಹುದು. ಇಲ್ಲದಿದ್ದರೆ, ವಿವರಣೆ ಇಲ್ಲವೆಂದು ಪರಿಗಣಿಸಿ ರೌಡಿಪಟ್ಟಿ ತೆರೆಯಲಾಗುವುದು ಎಂದು ಎಸಿಪಿಯು ನೋಟಿಸ್‌ನಲ್ಲಿ ಉಲ್ಲೇಖಿಸಿದ್ದರು.
ಪುನೀತ್ ಕೆರೆಹಳ್ಳಿ ಮತ್ತು ಸಹಚರರು ಕಾನೂನುಬಾಹಿರ ಚಟುವಟಿಕೆಗಳು, ಕೋಮು ಗಲಭೆ ಪ್ರಚೋದಿಸುವ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ರಾಮನಗರ ಜಿಲ್ಲೆಯಲ್ಲಿ ಗೋವುಗಳನ್ನು ಸಾಗಣೆ ಮಾಡುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪದಡಿ ಪುನೀತ್ ಕೆರೆಹಳ್ಳಿ ವಿರುದ್ಧ ಇತ್ತೀಚೆಗೆ ಪ್ರಕರಣ ದಾಖಲಾಗಿತ್ತು. ನಂತರ ಪೊಲೀಸರು ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಬಳಿಕ ಆತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net