ಅನಾಹುತ ಸಂಭವಿಸುತ್ತಿದ್ರೂ ಸುಗ್ರೀವಾಜ್ಞೆ ಜಾರಿಗೊಳಿಸಲು ಮೀನ-ಮೇಷ: ರಾಜ್ಯ ಸರ್ಕಾರ ವಿರುದ್ಧ ಆರ್​. ಅಶೋಕ ಕಿಡಿ | Micro Finance

ವಿಜಯವಾಣಿ - 2025-02-05T111559.645
Published on

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತು ಅನೇಕರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ವಿಪಕ್ಷ ನಾಯಕ ಆರ್​. ಅಶೋಕ, ಇವರ ಸರ್ಕಾರ, ಬಡವರ ಬದುಕಿನ ಜತೆ ಚೆಲ್ಲಾಟವಾಡುತ್ತಿದೆ ಎಂದು ಹೇಳಿದ್ದಾರೆ.

"ಮೈಕ್ರೋ ಫೈನಾನ್ಸ್ ಕಂಪನಿಗಳ ಸಾಲದ ಶೂಲಕ್ಕೆ ಸಿಲುಕಿ ಪ್ರಾಣ ಕಳೆದುಕೊಳ್ಳುತ್ತಿರುವ, ಬೀದಿಗೆ ಬರುತ್ತಿರುವ ಜನರ ಸಂಖ್ಯೆ ದಿನೇ ದಿನೇ ಏರಿಕೆ ಆಗುತ್ತಿದ್ದರೂ ಇನ್ನೂ ಎಚ್ಚರಗೊಳ್ಳದ ರಾಜ್ಯ ಕಾಂಗ್ರೆಸ್​ಸರ್ಕಾರ, ಮೈಕ್ರೋ ಫೈನಾನ್ಸ್ ಕಂಪನಿಗಳ ಒತ್ತಡಕ್ಕೆ ಮಣಿದು ಅವರ ಜತೆ ಶಾಮೀಲಾಗಿದೆಯೇ ಎನ್ನುವ ಅನುಮಾನ ಮೂಡುತ್ತಿದೆ. ಮೈಸೂರು, ಬೆಳಗಾವಿ ಜಿಲ್ಲೆಗಳಲ್ಲಿ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ" ಎಂದರು.

"ಹಾವೇರಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಆತಹತ್ಯೆಗೆ ಪ್ರಯತ್ನಿಸಿದ್ದಾರೆ. ಧಾರವಾಡ, ಗದಗ ಜಿಲ್ಲೆಗಳಲ್ಲಿ ಎರಡು ಕುಟುಂಬಗಳು ಬೀದಿಗೆ ಬಂದಿವೆ. ಇಷ್ಟೆಲ್ಲಾ ಅನಾಹುತ ನಡೆಯುತ್ತಿದ್ದರೂ ಸುಗ್ರೀವಾಜ್ಞೆ ಜಾರಿಗೊಳಿಸಲು ಇನ್ನೂ ಮೀನ ಮೇಷ ಎಣಿಸುತ್ತಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ, ಬಡವರ ಬದುಕಿನ ಜತೆ ಚೆಲ್ಲಾಟವಾಡುತ್ತಿದೆ" ಎಂದು ಕಿಡಿಕಾರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net