ಖುದ್ದು ವಿಚಾರಣೆಗೆ ಹಾಜರಾಗಿದ್ದ ರಾಹುಲ್ ಗಾಂಧಿ

rahul
Published on

ಬೆಂಗಳೂರು: ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಕಾಂಗ್ರೆಸ್‌ನ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಶುಕ್ರವಾರ ನಗರದ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು.
ರಾಹುಲ್ ಗಾಂಧಿ ಕಳೆದ ವಿಚಾರಣೆಗೆ ಗೈರು ಹಾಜರಾಗಿದ್ದರು. ಜೂ. ೭ ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಧೀಶರು ಸೂಚಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ದೆಹಲಿಯಿಂದ ಆಗಮಿಸಿದ್ದ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾದರು. ೪೨ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರು ಅವರಿಗೆ ಜಾಮೀನು ಮಂಜೂರು ಮಾಡಿ, ಮುಂದಿನ ವಿಚಾರಣೆಯನ್ನು ಜುಲೈ ೩೦ಕ್ಕೆ ಮುಂದೂಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕರು ರಾಹುಲ್ ಗಾಂಧಿ ಅವರ ಜತೆ ಕೋರ್ಟ್‌ಗೆ ಆಗಮಿಸಿದ್ದರು. ವಿಚಾರಣೆಯಲ್ಲಿ ರಾಹುಲ್ ಗಾಂಧಿಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ೭೫ ಲಕ್ಷ ರೂ. ಮೌಲ್ಯದ ಆಸ್ತಿಯ ವೈಯಕ್ತಿಕ ಬಾಂಡ್‌ನ ಭದ್ರತೆ ಒದಗಿಸಿದ್ದಾರೆ.
ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನ್ಯಾಯಾಲಕ್ಕೆ ಒಟ್ಟಿಗೆ ಆಗಮಿಸಿದ ವೇಳೆ ನ್ಯಾಯಾಧೀಶರಿಗೆ ನಮಸ್ಕರಿಸಿದರು. ನ್ಯಾಯಾಲಯ ಮೊದಲ ಅರ್ಜಿಯನ್ನಾಗಿ ಪ್ರಕರಣವನ್ನು ಕೈಗೆತ್ತಿಕೊಂಡಿತ್ತು. ಈ ವೇಳೆ ರಾಹುಲ್ ಗಾಂಧಿ ಪರ ವಕೀಲರು ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು. ವಕೀಲರ ಮನವಿ ಪರಿಗಣಿಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದರು. ರಾಹುಲ್ ಜಾಮೀನು ಬಾಂಡ್‌ಗೆ ಸಹಿ ಹಾಕಿದರು.

ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಬಿಗಿ ಭದ್ರತೆ:
ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರಿಯ ವಿಮಾನ ನಿಲ್ದಾಣದಿಂದ ಸಿಟಿ ಸಿವಿಲ್ ಕೋರ್ಟ್‌ವರೆಗೂ ವ್ಯಾಪಕ ಭದ್ರತೆಯನ್ನು ಒದಗಿಸಲಾಗಿತ್ತು. ಸಿಟಿ ಸಿವಿಲ್ ಕೋರ್ಟ್ ಸಮುಚ್ಚಯದ ಬಳಿ ೫೦೦ ಹೆಚ್ಚು ಪೊಲೀಸರನ್ನು ನಿಯೋಜಿಸಿ ಬಿಗಿ ಭದ್ರತೆ ಕೈಗೊಂಡಿದ್ದರು. ಬೆಳಗ್ಗೆ ೯.೧೫ ರ ಸುಮಾರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ವಾಗತಿಸಿದರು. ಬಳಿಕ ಎಲ್ಲ ನಾಯಕರು ಒಂದೇ ಕಾರಿನಲ್ಲಿ ಖಾಸಗಿ ಹೋಟೆಲ್‌ಗೆ ತೆರಳಿ ಉಪಹಾರ ಸೇವಿಸಿದರು. ನಂತರ ೧೧ ಗಂಟೆ ಸುಮಾರಿಗೆ ಒಂದೇ ಕಾರಿನಲ್ಲಿ ಕೋರ್ಟ್‌ಗೆ ಆಗಮಿಸಿದರು. ಕಾರಿನಿಂದ ಇಳಿಯುತ್ತಿದಂತೆ ರಾಹುಲ್ ಜನರತ್ತ ಕೈ ಬೀಸಿದರು. ೧೧.೨೦ ರ ಸುಮಾರಿಗೆ ವಿಚಾರಣೆ ಮುಗಿಸಿ ಎಲ್ಲರು ಒಟ್ಟಿಗೆ ಅಲ್ಲಿಂದ ನೇರವಾಗಿ ಕೆಪಿಸಿಸಿ ಕಚೇರಿಗೆ ಹೋದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net