

ಬೆಂಗಳೂರು: 2022ರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿತ್ತು. ಹೀಗಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ಹೂಡಿತ್ತು. ಬಿಜೆಪಿ ಕೇಸಿನ ಹಿನ್ನೆಲೆ ಇಂದು ರಾಹುಲ್ ಗಾಂಧಿ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಪರ ವಕೀಲರು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಿದರು. ರಾಹುಲ್ ಗಾಂಧಿಗೆ ಮಾಜಿ ಸಂಸದ ಡಿ.ಕೆ ಸುರೇಶ್ ಬಾಂಡ್ ಶ್ಯೂರಿಟಿ ನೀಡಿದ್ದಾರೆ. ರಾಹುಲ್ ಗಾಂಧಿ ಜೊತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನ್ಯಾಯಾಲಯದಲ್ಲಿ ಹಾಜರಿದ್ದರು.