40% ಕಮಿಷನ್​ ಆರೋಪ; ರಾಹುಲ್‌ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ಗೆ ಸಮನ್ಸ್​ ಜಾರಿ ಮಾಡಿದ ಕೋರ್ಟ್​

SIddu DK Rahul
Published on

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್​ ಆರೋಪದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ನ್ಯಾಯಾಲಯ ಸಮನ್ಸ್​ ಜಾರಿ ಮಾಡಿದೆ.

ಕಳೆದ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಕಾಂಗ್ರೆಸ್ ಬಿಜೆಪಿ 40% ಕಮಿಷನ್‌ ಸರ್ಕಾರ ಎಂದು ಅಭಿಯಾನ ಮಾಡಿತ್ತು. ಮಾತ್ರವಲ್ಲದೇ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಪೇಸಿಎಂ ಪೋಸ್ಟರ್‌ಗಳನ್ನು ಸಹ ಹಾಕಿತು. ಸಾಮಾಜಿಕ ಜಾಲತಾಣಗಳಲ್ಲಿ ಭ್ರಷ್ಟಾಚಾರ ರೇಟ್ ಕಾರ್ಡ್ ಜಾಹೀರಾತು ನೀಡಿತ್ತು.

ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ್ದಾರೆ, ಜಾಹೀರಾತಿನಿಂದ ಬಿಜೆಪಿ ಪಕ್ಷಕ್ಕೆ ಹಾನಿಯಾಗಿದೆ ಎಂದು ವಕೀಲ ವಿನೋದ್​ ಕುಮಾರ್​ ಎಂಬುವವರು ದೂರು ದಾಖಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದ ಜೆ.ಪ್ರೀತ್ ಅವರಿದ್ದ ಏಕಸದಸ್ಯ ಪೀಠವು ಮಾರ್ಚ್ 28ಕ್ಕೆ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಖುದ್ದು ಹಾಜರಾಗುವಂತೆ ಸಮನ್ಸ್​ ಜಾರಿ ಮಾಡಿದೆ.

40% ಕಮಿಷನ್​ ವಿಚಾರ ಹಾಗೂ ಪೇಸಿಎಂ ಅಭಿಯಾನದ ವಿರುದ್ಧ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್‌. ಶಿವಪ್ರಸಾದ್‌, ಕೆಪಿಸಿಸಿ ಹಾಗೂ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜಾಹೀರಾತು ನೀಡಿ ಪಕ್ಷದ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಪಕ್ಷಕ್ಕೆ ಹಾನಿಯಾಗಿದೆ. ಈ ನಿಟ್ಟಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋರಿ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net