ಬಿಜೆಪಿ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್ ಮುಖಂಡರ ಪ್ರತಿಭಟನೆ

23-RNR-07
Published on

ಹಾವೇರಿ: ಅಸ್ಸಾಂನ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿಯವರ ಭಾರತ ಜೋಡೊ ನ್ಯಾಯ ಯಾತ್ರೆಗೆ ತಡೆಯೊಡ್ಡಿ, ಪಾದಯಾತ್ರೆಯಲ್ಲಿ ಪಾಲ್ಗೊಂಡವರ ಮೇಲಿನ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಂಗಳವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಮೈಲಾರ ಮಾಹಾದೇವ ವೃತ್ತದಿಂದ ಆರಂಭಗೊಂಡ ಪ್ರತಿಭಟನೆ ಮೆರವಣಿಗೆ ಜೆ.ಪಿ.ವೃತ್ತದ ಮೂಲಕ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಆಗಮಿಸಿತು. ನಂತರ ಪ್ರತಿಭಟನಾಕಾರರು ಕೆಲಹೊತ್ತು ರಸ್ತೆ ತಡೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಬಸವರಾಜ ಶಿವಣ್ಣನವರ ಮಾತನಾಡಿ, ರಾಹುಲ್ ಗಾಂಧಿಯವರು ಈ ಹಿಂದೆ ಭಾರತ ಜೋಡೊ ಯಾತ್ರೆಯನ್ನು ಯಶಸ್ವಿಯಾಗಿ ಪೂರೈಸಿದ್ದರು. ಈಗ ಭಾರತ ಜೋಡೊ ನ್ಯಾಯ ಯಾತ್ರೆ ಆರಂಭಿಸಿದ್ದಾರೆ. ಇದರಿಂದ ಅಂಜಿಕೊಂಡಿರುವ ಬಿಜೆಪಿ ಬಲಪ್ರಯೋಗದ ಮೂಲಕ ಯಾತ್ರೆಗೆ ಅಡ್ಡಿ ಪಡಿಸುವ ಕೆಲಸವನ್ನು ಮಾಡುತ್ತಿದೆ. ಇಂತಹ ಕೀಳು ಮಟ್ಟದ ರಾಜಕಾರಣವನ್ನು ಬಿಜೆಪಿ ಕೈ ಬಿಡಬೇಕು. ರಾಹುಲ್ ಗಾಂಧಿ ಅವರು ಈ ಯಾತ್ರೆಯನ್ನು ಯಶಸ್ವಿಯಾಗಿ ಮುನ್ನಡೆಸಲಿದ್ದಾರೆ ಎಂದರು.
ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ ಮಾತನಾಡಿ, ಪ್ರಧಾನಿ ನರೆಂದ್ರ ಮೋದಿ ದೇಶದಲ್ಲಿ ಧಮನಕಾರಿ ಆಡಳಿತ ನಡೆಸುತ್ತಿದ್ದಾರೆ. ರಾಹುಲ್ ಗಾಂಧಿಗೆ ಅಸ್ಸಾಂ ಪ್ರವೇಶ ನಿರಾಕರಿಸಿ ಹಲ್ಲೆಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಬೇಕು. ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.
ರಾಹುಲ್ ಗಾಂಧಿ ಅವರು ದೇಶದ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಭಾರತ ಜೋಡೊ ನ್ಯಾಯ ಯಾತ್ರೆ ಆರಂಭಿಸಿದ್ದಾರೆ. ಯಾತ್ರೆಯ ಮೂಲಕ ದೇಶದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಸಹಿಸದ ಕೇಂದ್ರ ಸರ್ಕಾರ ಯಾತ್ರೆಯನ್ನು ತಡೆಯುವಂತಹ ಪ್ರಯತ್ನಕ್ಕೆ ಕೈ ಹಾಕಿದೆ. ಕೂಡಲೇ ಇದನ್ನು ಬಿಜೆಪಿಯವರು ಕೈ ಬಿಡಬೇಕು ಎಂದು ಒತ್ತಾಯಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ, ಪ್ರಸನ್ ಹಿರೇಮಠ, ಈರಪ್ಪ ಲಮಾಣಿ, ಪರಶುರಾಮ ಅಗಡಿ, ಲಿಂಗರಾಜ ಶಿವಣ್ಣನವರ, ವಿಶಾಲಾಕ್ಷಿ ಆನವಟ್ಟಿ, ಗೀತಾ ಪ್ರಕಾಶ ಸೇರಿ ಪಕ್ಷದ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net