

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲಗೊಂಡಿದ್ದು, ಕರಾವಳಿ ಜಿಲ್ಲೆಗಳ ಕೆಲವೆಡೆ ಮಾತ್ರ ಸಾಧಾರಣ ಪ್ರಮಾಣದ ಮಳೆಯಾಗುತ್ತಿದೆ. ಈ ವಾರಾಂತ್ಯಕ್ಕೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರ್ಷಧಾರೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದೆರೆಡು ವಾರದಿಂದ ಒಳನಾಡು ಜಿಲ್ಲೆಗಳ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿಲ್ಲ. ಅದರಲ್ಲೂ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಒಂದಿನಿತೂ ಮಳೆಯಾಗದೆ ಒಣ ಹವೆ ಮುಂದುವರಿದಿದೆ. ಇದು ಬಿತ್ತನೆ ಚಟುವಟಿಕೆ ಮೇಲೆ ಭಾರೀ ಪರಿಣಾಮ ಬೀರಿದ್ದು, ರೈತರು ಸಮಸ್ಯೆಗೆ ಒಳಗಾಗಿದ್ದಾರೆ. ಕೆಲ ಅಣೆಕಟ್ಟು ಹೊರತುಪಡಿಸಿ ಹೆಚ್ಚಿನ ಜಲಾಶಯಗಳಿಗೆ ನೀರಿನ ಹರಿವು ಕಡಿಮೆಯಾಗಿದೆ. ಇದರಿಂದಾಗಿ ಭತ್ತ ಸೇರಿದಂತೆ ನೀರಾವರಿ ಬೆಳೆಗಳಿಗೆ ಸಮಸ್ಯೆ ಉಂಟಾಗಿದೆ.
ಈ ಶನಿವಾರ ಅಥವಾ ಭಾನುವಾರದಿಂದ ಕೆಲ ದಿನಗಳವರೆಗೆ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸನದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ಕೋಲಾರ, ಚಿಕ್ಕಬಳ್ಳಾಪುರ ಹೊರತುಪಡಿಸಿ ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗುವ ನಿರೀಕ್ಷೆ ಮಾಡಲಾಗಿದೆ.