

ರಾಣೆಬೆನ್ನೂರ: ರಾಜ್ಯ ಸರ್ಕಾರ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಆದರೆ, ಜಿಲ್ಲೆಯ 3 ತಾಲೂಕನ್ನು ಕೈ ಬಿಟ್ಟಿರುವುದು ಸರಿಯಲ್ಲ. ಕೂಡಲೇ ಅವುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ರಾಜ್ಯ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಒತ್ತಾಯಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ರೈತ ಸಂಘಟನೆ ವತಿಯಿಂದ ಬಹಳಷ್ಟು ಬಾರಿ ಹೋರಾಟ ನಡೆಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಕೊನೆಗೂ ಸರ್ಕಾರ ಇದನ್ನು ಪರಿಗಣಿಸಿ ರಾಣೆಬೆನ್ನೂರ ತಾಲೂಕನ್ನು ಬರಪೀಡಿತ ಎಂದು ಘೋಷಿಣೆ ಮಾಡಿರುವುದು ಸಂಕಷ್ಟದಲ್ಲಿರುವ ತಾಲೂಕಿನ ರೈತರಲ್ಲಿ ಸ್ವಲ್ಪ ಮಟ್ಟಿಗೆ ಸಮಾಧಾನಗೊಳಿಸಿದೆ.
ಆದರೆ, ಜಿಲ್ಲೆಯ ಶಿಗ್ಗಾಂವಿ, ಬ್ಯಾಡಗಿ ಹಾಗೂ ಹಾನಗಲ್ಲ ತಾಲೂಕುಗಳನ್ನು ಕೈ ಬಿಟ್ಟಿರುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಅವುಗಳನ್ನು ಸೇರಿಸಿ ಇಡೀ ಹಾವೇರಿ ಜಿಲ್ಲೆಯೇ ಬರ ಪೀಡಿತ ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.