

ಬೆಂಗಳೂರು:ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿಗಳನ್ನು ಜನರ ಮೇಲೆ ಹೇರುತ್ತಿದ್ದು,5 ಗ್ಯಾರಂಟಿಗಳಿಗೆ ಹಣ ಹೊಂದಿಸಲು ಸಾಧ್ಯವಾಗದೆ ಜನರ ಕಿಸೆಗೆ ಕೈ ಹಾಕಿದೆ. ಜನರಿಗೆ ಅಗ್ಗದ ಆಮಿಷಗಳನ್ನು ಒಡ್ಡಿ ಜನರಿಂದಲೇ ದೊಡ್ಡ ಪ್ರಮಾಣದಲ್ಲಿ ಹಣ ಸುಲಿಗೆ ಮಾಡುತ್ತಿದೆ ಎಂದು ಜೆಡಿಎಸ್ ನಗರ ಘಟಕ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.
ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕಾಂಗ್ರೇಸ್ ಸರ್ಕಾರದ ವಿರುದ್ಧ ರಮೇಶ್ ಗೌಡ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸೈಕಲ್ ಹಾಗೂ ಟಾಂಗಾ ಗಾಡಿಗಳ ವಿನೂತನ ಪ್ರತಿಭಟನೆಯಲ್ಲಿ ಮಾತನಾಡಿದರು.
ಒಂದು ಕಡೆ ಗ್ಯಾರಂಟಿ ಕೊಡುತ್ತಿರುವ ಸರ್ಕಾರ, ಮತ್ತೊಂದು ಕಡೆ ಅದೇ ಜನರ ಮೇಲೆ ತೆರಿಗೆ ವಿಧಿಸುತ್ತಿದೆ. ಇದು ಯಾವ ನ್ಯಾಯ? ಒಂದು ಕೈಯ್ಯಲ್ಲಿ ಕೊಟ್ಟು ಇನ್ನೊಂದು ಕೈಯ್ಯಲ್ಲಿ ಕಿತ್ತುಕೊಳ್ಳುವ ಈ ಸರ್ಕಾರ ಜನ ವಿರೋಧಿ ಆಗಿದೆ. ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೆರಿದೆ ಇದರಿಂದ ಬಡವರು, ಮಧ್ಯಮ ವರ್ಗದ ಜನರ ಬದುಕು ದುಸ್ತರವಾಗಿದೆ ಆರೋಪಿಸಿದರು.
ಜೆಡಿಎಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ನಾಮಫಲಕ, ಘೋಷಣ ಫಲಕಗಳನ್ನು ಹಿಡಿದು ಘೋಷಣೆ ಕೂಗಿದರು ಜತೆಗೆ ಕೂಡಲೇ ಪೆಟ್ರೋಲ್, ಡೀಸೆಲ್ ಮೇಲೆ ವಿಧಿಸಿರುವ ತೆರಿಗೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜವರಾಯಿ ಗೌಡ ಸೇರಿ ಅನೇಕ ನಾಯಕರು ಟಾಂಗಾ ಗಾಡಿ ಹತ್ತಿ, ಸೈಕಲ್ ತುಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜೆಡಿಎಸ್ ರಾಜ್ಯ ಕಾನೂನು ವಿಭಾಗದ ಅಧ್ಯಕ್ಷ ಎ.ಪಿ.ರಂಗನಾಥ್, ಬೆಂಗಳೂರು ಮಹಾನಗರ ಕಾರ್ಯಧ್ಯಕ್ಷ ಜೆ.ಟಿ.ರೇವಣ್ಣ, ಬೆಂಗಳೂರು ಮಹಾನಗರದ ಯುವ ಘಟಕದ ಅಧ್ಯಕ್ಷ ಚಂದ್ರಶೇಖರ್, ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಶೈಲಾ ಸಂತೋಷ್ ರಾವ್ ಸೇರಿ ಪಕ್ಷದ ಮುಖಂಡ ಭಾಗಿಯಾಗಿದ್ದರು.