ಜಾರಕಿಹೊಳಿ ಸೆಕ್ಸ್ ಸಿಡಿ ಬಹಿರಂಗ: ಪಕ್ಷಕ್ಕೆ ತೀವ್ರ ಮುಜುಗರ ಆಗಿದೆ ಎಂದ ಪ್ರಲ್ಹಾದ್ ಜೋಶಿ

Pralhad Joshi 13 Jan 20
Pralhad Joshi
Published on

ಬೆಂಗಳೂರು: ಜಲಸಂಪನ್ಮೂಲ ಸಚಿವ ಹಾಗೂ ಉತ್ತರ ಕರ್ನಾಟಕದ ಪ್ರಭಾವಿ ರಾಜಕಾರಣಿ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ವಿಡಿಯೋ ಬಹಿರಂಗವಾಗಿರುವುದರಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿದೆ.

ವಿಡಿಯೋ ವಿಚಾರವಾಗಿ ಆರ್​​ಟಿ ನಗರ ಮೂಲದ ಯುವತಿಗೆ ರಮೇಶ್ ಜಾರಕಿಹೊಳಿ ಜೀವ ಬೆದರಿಕೆ ಹಾಕಿದ್ದಾರೆ, ಯುವತಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎನ್ನುವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು, ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ರಾಸಲೀಲೆ ವಿಡಿಯೋದಿಂದ ನಮ್ಮ ಪಕ್ಷಕ್ಕೆ ತೀವ್ರ ಮುಜುಗರ ಆಗಿದೆ. ಆದರೆ ಈ ವಿಡಿಯೋ ಬಗ್ಗೆ ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಬೇಕು ಎಂದು ಹೇಳಿದ್ದಾರೆ.

ನಮ್ಮದು ಶಿಸ್ತಿನ ಪಕ್ಷ. ನಾಯಕರಾದವರು ಸ್ವಂತ ಬದುಕಿನಲ್ಲಿ ಹಾಗೂ ಸಾರ್ವಜನಿಕವಾಗಿ ಶುದ್ಧಹಸ್ತರಾಗಿರಬೇಕು ಎಂದರು. ಸಿಡಿ ವಿಚಾರವಾಗಿ ಸಿಎಂ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಜೊತೆ ಚರ್ಚೆ ಮಾಡುತ್ತೇನೆ. ದೆಹಲಿಯಲ್ಲೂ ನಾಳೆ ಈ ಬಗ್ಗೆ ಮಾತನಾಡುತ್ತೇನೆ. ತಪ್ಪಿತಸ್ಥರಾಗಿದ್ದರೆ ಖಂಡಿತವಾಗಿಯೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ದೂರಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ಅವರು, ದಿನೇಶ ಕಲ್ಲಹಳ್ಳಿ‌ ಎನ್ನುವರು ಯುವತಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ದೂರು ನೀಡಿದ್ದಾರೆ. ಈ ರೀತಿಯ ಪ್ರಕರಣಗಳಲ್ಲಿ ಕೆಲವೊಂದು ಪ್ರಕ್ರಿಯೆ ಇದೆ. ಸಂತ್ರಸ್ತೆ ಹಾಗೂ ಆಕೆಯ ಕುಟುಂಸ್ಥರನ್ನು ಸಂಪರ್ಕಿಸಿ ಮುಂದಿನ ಕ್ರಮ ಕೈಗೊಳ್ಳುತ್ತವೆ ಎಂದು ಹೇಳಿದ್ದಾರೆ.

ಸಚಿವರ ಹೇಳಿಕೆ ಪಡೆಯುವ ವಿಚಾರವಾಗಿ ಮಾತನಾಡಿದ ಅವರು, ಅದನ್ನು ಮುಂದಿನ ದಿನಗಳಲ್ಲಿ ಪಡೆಯುತ್ತೇವೆ. ಅದರ ಮೂಲಕವೇ ತನಿಖೆ ನಡೆಸುತ್ತೇವೆ. ನಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದೇವೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net