ಅತ್ಯಾಚಾರ ಪ್ರಕರಣದ ಟ್ರಯಲ್ ಶುರು

prajwal
Published on

ಬೆಂಗಳೂರು: ಜಿಲ್ಲಾ ಪಂಚಾಯಿತಿ ಅಧ್ಯಕ್ಷನ ಪತ್ನಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಕೇಸಿನಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.

ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ. ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಸಂತೋಷ್ ಗಜಾನನ ಭಟ್, ಕ್ರೈಮ್ ನಂಬರ್ 20ರಲ್ಲಿ ಅರ್ಜಿಯನ್ನು ವಜಾಗೊಳಿಸಿ ಪ್ರಕರಣ ವಿಚಾರಣೆ ನಡೆಯುವಂತೆ ಆದೇಶಿಸಿದ್ದಾರೆ.

ಮತ್ತೊಂದೆಡೆ ಮನೆ ಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ತನ್ನ ಮೇಲಿನ ಆರೋಪಕ್ಕೆ ಸಾಕ್ಷ್ಯವಾಗಿರುವ ವಿಡಿಯೋ ತೋರಿಸುವಂತೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಈ ಅರ್ಜಿಯನ್ನು ವಜಾಗೊಳಿಸಿತು.

ಹೈಕೋರ್ಟ್, ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿಗಳು ವಜಾಗೊಂಡಿವೆ. ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಆರೋಪದಿಂದ ಮುಕ್ತ ಮಾಡುವಂತೆ ಕೋರಿದ್ದ ಅರ್ಜಿಗಳು ವಜಾಗೊಂಡಿರುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣಗೆ ಜೈಲೇಗತಿಯಾಗಿದೆ.

ಬುಧವಾರದಿಂದ ಕೋರ್ಟ್‌ನಲ್ಲಿ ಅತ್ಯಾಚಾರ ಪ್ರಕರಣಗಳ ವಿಚಾರಣೆ ನಡೆಯಲಿದ್ದು, ಈಗಾಗಲೇ ಕೋರ್ಟ್ ಸಾಕ್ಷಿದಾರರಿಗೆ ನೋಟಿಸ್ ಜಾರಿ ಮಾಡಿದೆ. ಐದಾರು ತಿಂಗಳ ಒಳಗೆ ವಿಚಾರಣೆ ನಡೆಸಿ ಅಂತಿಮ ತೀರ್ಪು ಬರುವ ಸಾಧ್ಯತೆಗಳು ಇವೆ ಎನ್ನಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net