ಸೆ.9ರಂದು ರಾಷ್ಟ್ರೀಯ ಲೋಕ್ ಅದಾಲತ್: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ಹೇಳಿಕೆ

lokadalat
Published on

ಬೆಂಗಳೂರು: ರಾಜ್ಯಾದಂತ ರಾಷ್ಟ್ರೀಯ ಲೋಕ್ ಅದಾಲತ್‌ಅನ್ನು ಸೆ.9ರಂದು ಹಮ್ಮಿಕೊಂಡಿದ್ದು, ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬಹುದು ಎಂದು ಪ್ರಧಾನ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮುರಳೀಧರ ಪೈ ಬಿ ಅವರು ತಿಳಿಸಿದರು.

ನಗರದ ಸಿವಿಲ್ ನ್ಯಾಯಾಲಯದ ಪ್ರಾಧಿಕಾರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವ್ಯಾಜ್ಯಪೂರ್ವ ಪ್ರಕರಣಗಳಾದ ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ಲೋಕ್ ಅದಾಲತ್‌ನಲ್ಲಿ ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಅವರು ಹೇಳಿದರು.

ಶುಲ್ಕ ಮರುಪಾವತಿಗೆ ಅವಕಾಶ:

ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದು ಮುರಳೀಧರ ಪೈ ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದದ ಸದಸ್ಯ ಕಾರ್ಯದರ್ಶಿ ವರದರಾಜ್ ಬಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net