ವಿಷ ಕುಡಿಯೋದಕ್ಕೂ ರೆಡಿ ಅಂತ ಹೇಳಿದ್ದೇಕೆ ಡಿಸಿಎಂ ಲಕ್ಷ್ಮಣ ಸವದಿ?

Lakshman Savadi
Published on

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೇವಲ ವದಂತಿಯಷ್ಟೇ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿಯೇ 2024ರ ವಿಧಾನಸಭೆ ಚುನಾವಣೆ ಎದುರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುನರುಚ್ಛರಿಸಿದ್ದಾರೆ.

ಚಿತ್ರಕಲಾ ಪರಿಷತ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಶಾಸಕರು ಮುಖ್ಯಮಂತ್ರಿ ವಿರುದ್ಧ ಪ್ರಧಾನಮಂತ್ರಿಗೆ ಪತ್ರ ಬರೆದಿದ್ದಾರೆ ಎಂಬುದು ಕೇವಲ ವದಂತಿ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಯಾವುದೇ ಚರ್ಚೆಗಳು ನಡೆದಿಲ್ಲ. ಸರ್ಕಾರ ಮತ್ತು ಪಕ್ಷದಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳಿರುತ್ತವೆ. ಅದನ್ನು ಮುಖ್ಯಮಂತ್ರಿಗಳು ಸರಿಪಡಿಸುತ್ತಾರೆ ಎಂದು ಹೇಳಿದರು.

ವಿಷ ಬೇಕಾದರೂ ಕುಡಿಯುತ್ತೇನೆ: ಮುಂಬರುವ ಸಿಂದಗಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ತಾವು ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ವಿಷ ಕುಡಿ ಎಂದು ಹೇಳಿದರೂ, ನಾನು ಕುಡಿಯುತ್ತೇನೆ. ನನ್ನ ಸ್ಪರ್ಧೆ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ. ಆ ಬಗ್ಗೆ ನಾನೂ ಚಿಂತನೆ ಮಾಡಿಲ್ಲ. ಪಕ್ಷ ಯಾವ ನಿಲುವು ತಳೆದರೂ ಅದಕ್ಕೆ ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದರು.

ಸಾರಿಗೆ ನೌಕರರ ಬೇಡಿಕೆ ಈಡೇರಿಕೆ: ಸಾರಿಗೆ ನೌಕರರು ಬಯಸಿದಂತೆ 9 ಬೇಡಿಕೆಗಳ ಪೈಕಿ 5 ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಲಾಗಿದೆ. ಉಳಿದಂತೆ ಪ್ರಮುಖ ಬೇಡಿಕೆಯಾದ ವೇತನ ಪರಿಷ್ಕರಣೆ ಕುರಿತಂತೆ ಈಗಾಗಲೆ ಸಭೆ ನಡೆಸಲಾಗಿದೆ. ಇನ್ನೂ ಮೂರ್ನಾಲ್ಕು ಸಭೆಗಳು ನಡೆಯಬೇಕಿದ್ದು, ಆನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ನಿಗಮಗಳಲ್ಲಿ ಆದಾಯ ಕುಸಿತ ಉಂಟಾಗಿದೆ. ಹೀಗಾಗಿ ಸಾಲ ಪಡೆಯಲಾಗುತ್ತಿದೆ. ಇದು ಸಾಮಾನ್ಯ ಪ್ರಕ್ರಿಯೆಯಾಗಿದ್ದು, ಅದರಿಂದ ನಿಗಮಗಳಿಗೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net