ಹೆಚ್ಚಿರುವ ಜವಾಬ್ದಾರಿ ಅರಿತುಕೊಳ್ಳಬೇಕು

ಪಿರಿಯಾಪಟ್ಟಣದಲ್ಲಿ ಸೋಮವಾರ ನಡೆದ ಸ್ತ್ರೀಶಕ್ತಿ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಿಸಲಾಯಿತು. ಸಚಿವ ಕೆ.ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಸುರೇಶ್, ನಿತಿನ್ ವೆಂಕಟೇಶ್, ಡಿ.ಟಿ.ಸ್ವಾಮಿ, ಸಿಡಿಪಿಒ ಮಮತಾ ಮತ್ತಿತರರಿದ್ದರು.
ಪಿರಿಯಾಪಟ್ಟಣದಲ್ಲಿ ಸೋಮವಾರ ನಡೆದ ಸ್ತ್ರೀಶಕ್ತಿ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಿಸಲಾಯಿತು. ಸಚಿವ ಕೆ.ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಸುರೇಶ್, ನಿತಿನ್ ವೆಂಕಟೇಶ್, ಡಿ.ಟಿ.ಸ್ವಾಮಿ, ಸಿಡಿಪಿಒ ಮಮತಾ ಮತ್ತಿತರರಿದ್ದರು.
Published on

ಪಿರಿಯಾಪಟ್ಟಣ: ಅಂಗನವಾಡಿ ಕಾರ್ಯಕರ್ತೆಯರಿಗೆ ಹೋರಾಟದ ಜತೆಗೆ ತಮ್ಮ ಜವಾಬ್ದಾರಿಯೂ ಹೆಚ್ಚಿದೆ ಎಂಬುದನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಬಳಿ ನಿರ್ಮಿಸಿರುವ ಸ್ತ್ರೀ ಶಕ್ತಿ ಭವನವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

ಸಮಾಜದ ಎಲ್ಲಾ ವರ್ಗದ ಮಕ್ಕಳೊಂದಿಗೆ ಬೆರೆಯುವ ಅವಕಾಶ ಅಂಗನವಾಡಿ ಕಾರ್ಯಕರ್ತೆಯರಿಗೆ ಇದೆ. ಹೋರಾಟ ಮಾಡಿ ನಿಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳುವುದರ ಜತೆಗೆ ಮಕ್ಕಳಿಗೆ ಉತ್ತಮ ತಿಳುವಳಿಕೆ ಮತ್ತು ಕಲಿಕೆಯನ್ನು ಒದಗಿಸುವ ಜವಾಬ್ದಾರಿ ನಿಮ್ಮದಾಗಿರುತ್ತದೆ ಎಂದರು.
ಸರ್ಕಾರ ಯಾವಾಗಲೂ ನಿಮ್ಮ ಪರವಾಗಿಯೇ ಇರುತ್ತದೆ ಬೇಡಿಕೆಗಳು ನ್ಯಾಯಯುತವಾಗಿದ್ದಲ್ಲಿ ಸರ್ಕಾರ ಸ್ಪಂದಿಸಲಿದೆ ಎಂದು ಭರವಸೆ ನೀಡಿದರು.
ಕಲಿಕಾ ಕೇಂದ್ರಗಳನ್ನು ತೆರೆಯಲು ಮುಂದಾಗಿದ್ದ ಕೇಂದ್ರ ಸರ್ಕಾರದ ಕ್ರಮವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಬಲವಾಗಿ ವಿರೋಧಿಸಿ ಅಂಗನವಾಡಿ ಕೇಂದ್ರಗಳಲ್ಲಿಯೇ ಕಲಿಕಾ ಕೇಂದ್ರಗಳನ್ನು ತೆರೆಯುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶ್ಲಾಘಿಸಿದರು. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದು ಮುಂದಿನ ದಿನಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜವಾಬ್ದಾರಿ ಮತ್ತಷ್ಟು ಹೆಚ್ಚಲಿದೆ ಎಂದರು.

ತಾಲೂಕಿನಲ್ಲಿ ಯಾವುದೇ ದೂರುಗಳು ಬರದಂತೆ ಅಂಗನವಾಡಿ ಕಾರ್ಯಕರ್ತೆಯರು ಕರ್ತವ್ಯ ನಿರ್ವಹಿಸುತ್ತಿರುವುದು ಮೆಚ್ಚುಗೆಯ ವಿಷಯವಾಗಿದ್ದು, ಸ್ಥಳೀಯ ಮಟ್ಟದಲ್ಲಿ ಕಂಡುಬರುವ ಸಣ್ಣಪುಟ್ಟ ದೂರುಗಳನ್ನು ಅಲ್ಲಿಯೇ ಸರಿಪಡಿಸಿಕೊಂಡು ಜನರ ವಿಶ್ವಾಸ ಗಳಿಸಿ ಎಂದು ಕಿವಿಮಾತು ಹೇಳಿದರು.

ಈಗ ಉದ್ಘಾಟನೆ ಆಗಿರುವ ಸ್ತ್ರೀಶಕ್ತಿ ಭವನದ ಮುಂಭಾಗದಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿ ಮಹಿಳೆಯರ ಕರಕುಶಲ ವಸ್ತುಗಳ ಮಾರಾಟಕ್ಕೆ ಅವಕಾಶ ಕಲ್ಪಿಸುವಂತೆ ಮನವಿ ಬಂದಿದ್ದು ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸುರೇಶ್ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರಿಗೆ ತಮ್ಮ ಕರ್ತವ್ಯದಲ್ಲಿ ಚುರುಕು ಮೂಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಉತ್ತಮ ತಾಂತ್ರಿಕತೆಯುಳ್ಳ ಸ್ಮಾರ್ಟ್ ಫೋನ್‌ಗಳನ್ನು ನೀಡಲಾಗುತ್ತಿದ್ದು ತಮ್ಮ ಕಾರ್ಯ ವೈಖರಿಯನ್ನು ಅಭಿವೃದ್ಧಿಪಡಿಸಿಬಹುದಾಗಿದೆ ಎಂದರು.

ಸ್ತ್ರೀೀಶಕ್ತಿ ಭವನದ ಮುಂಭಾಗ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿ ಮಹಿಳೆಯರಿಗೆ ನೀಡಿದಲ್ಲಿ ಮಹಿಳೆಯರಲ್ಲಿರುವ ಕರಕುಶಲತೆ ಮತ್ತು ಪ್ರಬುದ್ಧತೆ ಇತರರಿಗೆ ತಿಳಿಸಲು ಸಹಕಾರಿ ಆಗಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಿಸಲಾಯಿತು.ಈ ಸಂದರ್ಭದಲ್ಲಿ ತಾಲೂಕು ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ, ಸಿಡಿಪಿಒ ಮಮತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾ ಅಧಿಕಾರಿ ಮಂಜುನಾಥ್, ತಾಪಂ ಇಒ ಸುನಿಲ್ ಕುಮಾರ್, ಸ್ತ್ರೀಶಕ್ತಿ ಒಕ್ಕೂಟದ ಜಿಲ್ಲಾ ಅಧ್ಯಕ್ಷೆ ಟಿ.ಎಸ್.ಪ್ರೇಮಕುಮಾರಿ, ತಾಲೂಕು ಅಧ್ಯಕ್ಷೆ ರೆಹನಾ, ಮೇಲ್ವಿಚಾರಕರಾದ ಧನ್ಯರತಿ, ಸುನೀತಾ, ಸವಿತಾ, ರೇಖಾ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net