

ಸಾಗರ: ಮಕ್ಕಳ ಆಸಕ್ತಿಯನ್ನು ಗುರುತಿಸಿ ಅದೇ ಕ್ಷೇತ್ರದಲ್ಲಿ ಮುಂದುವರಿಯುವಂತೆ ಪ್ರೋತ್ಸಾಹಿಸಬೇಕು. ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗೆ ಅಗತ್ಯ ಬೆಂಬಲವನ್ನು ಪಾಲಕರು, ಶಿಕ್ಷಕರು ನೀಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸಲಹೆ ನೀಡಿದರು.
ಸಾಗರದ ಶಿವಪ್ಪನಾಯಕ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆಯಿಂದ 14 ವರ್ಷದೊಳಗಿನವರ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿ ಮಗುವಿನಲ್ಲೂ ಪ್ರತಿಭೆ ಸುಪ್ತವಾಗಿರುತ್ತದೆ. ಅದನ್ನು ಗುರುತಿಸುವ ಕೆಲಸವಾಗಬೇಕು. ಮನೆಯಲ್ಲಿ ಪಾಲಕರು, ಶಾಲೆಯಲ್ಲಿ ಶಿಕ್ಷಕರು, ಸಮಾಜದಲ್ಲಿ ಸಂಘಟಕರು ವೇದಿಕೆ ಕಲ್ಪಿಸಿಕೊಡಬೇಕು. ಮಕ್ಕಳ ಬೌದ್ಧಿಕ ಸಾಮರ್ಥ್ಯ ವೃದ್ಧಿಗೆ ಇಂತಹ ಕಾರ್ಯಕ್ರಮಗಳು ಅಗತ್ಯ ಎಂದು ಹೇಳಿದರು.
ನಗರಸಭಾ ಸದಸ್ಯರಾದ ಗಣಪತಿ ಮಂಡಗಳಲೆ, ಸವಿತಾ ವಾಸು, ಮಧುಮಾಲತಿ, ಉಮೇಶ್, ರವಿ ಲಿಂಗನಮಕ್ಕಿ, ಭೂಮೇಶ್ ಜಗನ್ನಾಥ್, ಹನುಮಂತಪ್ಪ ಎಂ.ಪಿ.ಸತ್ಯನಾರಾಯಣ, ಬಿಇಒ ಪರಶುರಾಮಪ್ಪ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಮಾಲತೇಶ್, ಎಸ್‌ಡಿಎಂಸಿ ಅಧ್ಯಕ್ಷ ಮೋಹನ್ ಇತರರಿದ್ದರು.