

ಬೆಂಗಳೂರು: ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದ, ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಹಂತ ಹಂತವಾಗಿ ತೆಗೆದು ಹಾಕಬೇಕು. ಆದರೆ ಒಬ್ಬನೇ ಒಬ್ಬ ಅರ್ಹ ಬಿಪಿಎಲ್ ಕಾರ್ಡುದಾರನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದರು.
ಆಹಾರ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡಿದ ಸಿಎಂ, ಅನರ್ಹ ಬಿಪಿಎಲ್ ಪಡಿತರ ಚೀಟಿದಾರರು ಸ್ವಯಂ ತಮ್ಮ ಬಿಪಿಎಲ್ ಕಾರ್ಡ್‌ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು, ಆ ಬಳಿಕ ಅಂತವರಿಗೆ ನೊಟೀಸ್ ನೀಡಿ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಈಗಾಗಲೇ 4ಸಾವಿರ ಸರ್ಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂಬ ಅಂಶವನ್ನು ಅಧಿಕಾರಿಗಳು ಇದೇ ವೇಳೆ ಹಂಚಿಕೊಂಡರು.
ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ 4692 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್ ಅಂತ್ಯದವರೆಗೆ 3253 ಕೋಟಿ ರೂ. ವೆಚ್ಚ ಮಾಡಲಾಗಿದೆ. 4,44,48,294 ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಪಡಿತರ ಹಾಗೂ ಆಹಾರ ಧಾನ್ಯ ವಿತರಣಾ ವ್ಯವಸ್ಥೆಯನ್ನು ತಳಹಂತದಲ್ಲಿ ಬಲಪಡಿಸುವ ಮೂಲಕ ಜಾಗೃತಿ ಸಮಿತಿಗಳಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಬೇಕು. ಸಮಿತಿ ನಿಯಮಿತವಾಗಿ ಸಭೆ ನಡೆಸುವುದನ್ನು ಖಾತ್ರಿಪಡಿಸಬೇಕು ಎಂದು ಸಿಎಂ ತಿಳಿಸಿದರು.
ಕನಿಷ್ಠ ಬೆಂಬಲ ಬೆಲೆ ಅಡಿ ಆಹಾರ ಧಾನ್ಯ ಸಂಗ್ರಹಿಸಲು ಎಲ್ಲಾ ವ್ಯವಸ್ಥೆ ಮಾಡಬೇಕು. ರೈತರಿಗೆ ಸಮಸ್ಯೆಯಾಗದಂತೆ ತ್ವರಿತವಾಗಿ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.
ರಾಜ್ಯದಲ್ಲಿ 1,53,69,945 ಪಡಿತರ ಚೀಟಿಗಳಿದ್ದು, 5,30,88,636 ಸದಸ್ಯ ಫಲಾನುಭವಿಗಳಿದ್ದಾರೆ. ಇಲಾಖೆಯಲ್ಲಿ ಒಟ್ಟು 709 ಹುದ್ದೆಗಳು ಖಾಲಿ ಇವೆ. ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ ಕರ್ನಾಟಕದಲ್ಲಿ ಬೇರೆ ರಾಜ್ಯಗಳ 13,383 ಫಲಾನುಭವಿಗಳು ಪಡಿತರ ಸೌಲಭ್ಯ ಪಡೆಯುತ್ತಿದ್ದಾರೆ. ಕುಟುಂಬದಲ್ಲಿ ಒಬ್ಬರೇ ಇರುವ, 80 ವರ್ಷ ದಾಟಿದವರಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯ ಒದಗಿಸುವ ಅನ್ನ-ಸುವಿಧಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. 8,500 ಪಡಿತರ ಚೀಟಿದಾರರು ಯೋಜನೆಯಡಿ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡರು. ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸಭೆಯಲ್ಲಿ ಹಾಜರಿದ್ದರು.