

Stampede Case: RCB ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಆಯೋಗದ ವರದಿಯನ್ನು ಮುಂದಿನ ಸಚಿವ ಸಂಪುಟದಲ್ಲಿ ತನಿಖಾ ವರದಿಯ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರಿನಲ್ಲಿ ನಾಳೆ ನಡೆಯಲಿರುವ ಸಮಾವೇಶದ ಬಗ್ಗೆ ಬಿಜೆಪಿಯವರು ಟೀಕೆ ವ್ಯಕ್ತಪಡಿಸುತ್ತಿರುವ ಬಗ್ಗೆ ಉತ್ತರಿಸಿ, ನಾಳೆ ಸುಮಾರು 2,600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.
ಬಿಜೆಪಿ. ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ನಾಳೆ ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ ಎಂದು CM ತಿಳಿಸಿದರು.
ಕೃಷ್ಣಾ ಜಲವಿವಾದ ನ್ಯಾಯಾಧೀಕರಣದ ಅವಧಿಯನ್ನು ವಿಸ್ತರಿಸಿರುವ ಬಗ್ಗೆ ಯಾವುದೇ ವಿರೋಧವಿಲ್ಲ. ಆದರೆ ನೀರು ಹಂಚಿಕೆಯ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೆ ಅಧಿಸೂಚನೆ ಹೊರಡಿಸಿಲ್ಲ. ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದ ನಡುವೆ ಅಂತರ ರಾಜ್ಯ ಜಲವಿವಾದವಿದ್ದು, ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ನೀರು ಹಂಚಿಕೆಯ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಯಾವುದೇ ಅಡ್ಡಿಯಿರುವುದಿಲ್ಲ ಮತ್ತು ತೀರ್ಪಿನನ್ವಯ ನೀರಿನ ಹಂಚಿಕೆಯಲ್ಲಿ ರಾಜ್ಯಕ್ಕೆ ಯಾವುದೇ ನಷ್ಟವೂ ಆಗುವುದಿಲ್ಲ. ಆಲಮಟ್ಟಿ ಜಲಾಶಯದ ಎತ್ತರವನ್ನು 524.26 ಮೀ ಗಳಿಗೆ ಹೆಚ್ಚಿಸಲು ಅನುಮತಿ ನೀಡಿದ್ದಾರೆ ಎಂದರು.
ಬೆಂಗಳೂರಿನ ಸುಮಾರು 40 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಹುಸಿ ಬಾಂಬ್ ಕರೆಯಿರಬಹುದೇ ಎಂಬ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು. ಸುಳ್ಳು ಹೇಳಿ ಅಪಪ್ರಚಾರ , ಪ್ರಚೋದನೆಗೊಳಿಸುವ ಕೃತ್ಯಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಕಾನೂನು ರೂಪಿಸಲಾಗುತ್ತಿದೆ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಹೆಸರಿಗೆ ಕಾಂಗ್ರೆಸ್ ಸೂಚಿಸಲಿ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಈ ರೀತಿ ಹೇಳಿಕೆ ನೀಡುತ್ತಿರುವ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬಿಜೆಪಿ ಅಧ್ಯಕ್ಷಗಿರಿಯನ್ನು ಎಸ್ ಸಿ ವರ್ಗದವರಿಗೆ ಬಿಟ್ಟುಕೊಡಲಿ ಮತ್ತು ದೇಶದ ಪ್ರಧಾನಿ ಸ್ಥಾನವನ್ನು ಪರಿಶಿಷ್ಟ ಜಾತಿಗೆ ಸೇರಿದವರಿಗೆ ಮೊದಲು ಬಿಟ್ಟುಕೊಡಲಿ ಎಂದರು.