ವೈದ್ಯರ ಕಾರ್ಯವೈಖರಿ ವರದಿ ನೀಡಿ

health
ಜಿಪಂನಲ್ಲಿ ನಡೆದ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದರು. ಎಚ್.ಡಿ.ತಮ್ಮಯ್ಯ, ನಯನಾ ಮೋಟಮ್ಮ, ಮೀನಾ ನಾಗರಾಜ್, ಡಾ. ಬಿ.ಗೋಪಾಲಕೃಷ್ಣ ಇತರರಿದ್ದರು.
Published on

ಚಿಕ್ಕಮಗಳೂರು: ಸರ್ಕಾರಿ ಆಸ್ಪತ್ರೆಗಳ ವೈದ್ಯರು, ಅಧಿಕಾರಿಗಳ ಕಾರ್ಯವೈಖರಿ ಕುರಿತು ಜಿಪಂ ಸಿಇಒ, ಜಿಲ್ಲಾಧಿಕಾರಿ ಪರಿಶೀಲಿಸಿ ವರದಿ ನೀಡಬೇಕು. ಸೇವೆ ನೀಡುವಲ್ಲಿ ಹಿಂದೆ ಉಳಿದಿರುವವರ ಬಗ್ಗೆ ವರದಿ ನೀಡಿದರೆ ಕ್ರಮ ಜರುಗಿಸಲಾಗುವುದು. ವೈದ್ಯರು, ಸಿಬ್ಬಂದಿ ಹಣಕ್ಕಾಗಿ ರೋಗಿಗಳಿಗೆ ಬೇಡಿಕೆ ಇಟ್ಟರೆ ಪರಿಣಾಮ ಎದುರಿಸಬೇಕಾಗುತ್ತದೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಸಿದರು.

ಜಿಪಂನಲ್ಲಿ ಗುರುವಾರ ಆಯೋಜಿಸಿದ್ದ ಆರೋಗ್ಯ ಇಲಾಖೆ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚಾಗಿ ಕಾರ್ಮಿಕರು, ಬಡವರು ಬರುತ್ತಾರೆ. ಅವರಿಗೆ ಗುಣಮಟ್ಟದ ಸೇವೆ ನೀಡುವುದು ಮುಖ್ಯಉದ್ದೇಶ. ಸೇವೆ ಮಾಡಲು ಆಸಕ್ತಿ ಇಲ್ಲದಿದ್ದರೆ ಮನೆಗೆ ಹೋಗಬಹುದು ಎಂದರು.
ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯರು, ಶುಶ್ರೂಷಕಿಯರು, ಲ್ಯಾಬ್ ಟೆಕ್ನಿಷಿಯನ್ ಸೇರಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲಿಯ ತನಕ ಅಗತ್ಯವಿರುವ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಆರೋಗ್ಯ ಇಲಾಖಾಧಿಕಾರಿಗಳು ಮುಂದಾಗಬೇಕು ಎಂದು ಸೂಚಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಘಟಕಗಳನ್ನು ನಿರ್ವಹಣೆ ಮಾಡಲು ಈ ಹಿಂದೆ ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡಲಾಗಿತ್ತು. ಸಂಸ್ಥೆ ಸಮರ್ಪಕವಾಗಿ ನಿರ್ವಹಿಸುತ್ತಿರಲಿಲ್ಲ. ಹೊಸ ಯಂತ್ರಗಳ ಅಳವಡಿಕೆಗೆ ಟೆಂಡರ್ ಕರೆದು ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಏಜೆನ್ಸಿಗೆ ಕೊಡುವ ಬದಲು ಆಸ್ಪತ್ರೆಗಳಿಂದಲೇ ನಡೆಸಿದರೆ ಚೆನ್ನಾಗಿರುತ್ತದೆ ಎಂದು ಹೇಳಿದರು.
ಅಧಿಕಾರಿಗಳು ಕೊಟ್ಟಿರುವ ಮಾಹಿತಿಗೂ, ಆಸ್ಪತ್ರೆಗಳ ಪರಿಸ್ಥಿತಿಗೂ ಬಹಳ ವ್ಯತ್ಯಾಸವಿದೆ. ಸಮಸ್ಯೆಗಳು ಇದ್ದರೂ ಅಧಿಕಾರಿಗಳು ಕಾರಣ ಹೇಳಬಾರದು ಎಂದು ತಾಕೀತು ಮಾಡಿದರು.
ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ, ನಿರೀಕ್ಷಿತ ಮಟ್ಟದಲ್ಲಿ ಬಡವರಿಗೆ ಚಿಕಿತ್ಸೆ ಸಿಗುತ್ತಿಲ್ಲ. ಸರ್ಜನ್‌ಗಳು ಸರಿಯಾಗಿ ಆಸ್ಪತ್ರೆಗಳಿಗೆ ಬರುತ್ತಿಲ್ಲ ಎಂದು ದೂರಿದರು.
ಶಾಸಕ ಎಚ್.ಡಿ.ತಮ್ಮಯ್ಯ, ಡಿಸಿ ಸಿ.ಎನ್.ಮೀನಾ ನಾಗರಾಜ್, ಜಿಪಂ ಸಿಇಒ ಡಾ. ಬಿ.ಗೋಪಾಲಕೃಷ್ಣ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net