ಸೂಕ್ಷ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳ ಪ್ರೋತ್ಸಹಕ್ಕೆ ಹೆಚ್ಚಿನ ಅನುದಾನಕ್ಕೂ ಮನವಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.

shobha
Published on

ಬೆಂಗಳೂರು: ದೇಶದ ದೊಡ್ಡ ಕೈಗಾರಿಕೆಗಳು ಹಾಗೂ ಸಾರ್ವಜನಿಕ ಉದ್ದಿಮೆಗಳು ಹೊರ ದೇಶದಿಂದ ಆಮದು ಮಾಡಿಕೊಳ್ಳುತ್ತಿರುವ ಬಿಡಿಭಾಗಗಳ ಸಂಗ್ರಹಣೆಗೆ ದೇಶದಲ್ಲಿರುವ ಎಂಎಸ್‌ಎಂಇ ಗಳಿಗೆ ಆದ್ಯತೆ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಭಾರತ ಸರಕಾರದ ಎಂಎಸ್‌ಎಂಇ ಮಂತ್ರಾಲಯದ ಸಹಯೋಗದಲ್ಲಿ ಫೆಡರೇಶನ್ ಆ್ ಕರ್ನಾಟಕ ಚೇಂಬರ್ಸ್ ಆ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ 2 ದಿನಗಳ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಮಾವೇಶ - 2024 ಗೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದ ಕೈಗಾರಿಕಾ ಕ್ಷೇತ್ರಕ್ಕೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಕೊಡುಗೆ ಅಪಾರ. ಹೆಚ್ಚಿನ ಉದ್ಯೋಗ ಸೃಷ್ಟಿಗೆ ಎಂಎಸ್‌ಎಂಇ ಗಳೂ ಕಾರಣ. ಇವುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಈ ಬಾರಿಯ ಆಯವ್ಯಯದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ ಅಲ್ಲದೆ, ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತ ನನಸಾಗುವ ನಿಟ್ಟಿನಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಪ್ರಮುಖ ಪಾತ್ರವಹಿಸಲಿವೆ ಎಂದು ಹೇಳಿದರು.

ಈ ಕ್ಷೇತ್ರದಲ್ಲಿ ಮಾನವ ಸಂಪನ್ಮೂಲದ ಕೌಶಲ್ಯವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕಾದ ಅವಶ್ಯಕತೆಯಿದೆ. ನಮ್ಮ ದೇಶದ ಜಿಡಿಪಿಯಲ್ಲಿ ಹೆಚ್ಚಿನ ಕೊಡುಗೆ ನೀಡುವುದಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೊಸ ಕೈಗಾರಿಕೆಗಳನ್ನು ಪ್ರಾರಂಭಿಸಲು ಇರುವ ಸಬ್ಸಿಡಿಗಳನ್ನು ಪಡೆಯಲು ಪ್ರತಿ ವರ್ಷ ಸುಮಾರು 5 ಲಕ್ಷ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ನಮ್ಮ ಇಲಾಖೆಯಿಂದ ಕೇವಲ 90 ಸಾವಿರ ಜನರಿಗೆ ಮಾತ್ರ ಸಬ್ಸಿಡಿ ನೀಡಲು ಸಾಧ್ಯವಾಗುತ್ತಿದೆ. ಇದನ್ನ ಹೆಚ್ಚಿಸುವ ನಿಟ್ಟಿನಲ್ಲಿ ನಮ್ಮ ಇಲಾಖೆಗೆ ಹೆಚ್ಚಿನ ಅನುದಾನ ನೀಡುವಂತೆ ಹಣಕಾಸು ಸಚಿವರಿಗೆ ಮನವಿ ಸಲ್ಲಿಸಿದ್ದೇವೆ ಎಂದರು.

ದೇಶದಲ್ಲಿರುವ ದೊಡ್ಡ ಹಾಗೂ ಸಾರ್ವಜನಿಕ ಉದ್ದಿಮೆಗಳು ತಮಗೆ ಬೇಕಾದ ಬಹುತೇಕ ಕಚ್ಚಾವಸ್ತುಗಳನ್ನ ಹೊರ ದೇಶದಿಂದ ಆಮದು ಮಾಡಿಕೊಳ್ಳುತ್ತಿವೆ. ನಮ್ಮ ದೇಶದಲ್ಲಿರುವ ಎಂಎಸ್‌ಎಂಇ ಗಳಿಗೆ ಆದ್ಯತೆ ನೀಡುವ ಉದ್ದೇಶದಿಂದ ಸಾರ್ವಜನಿಕ ಉದ್ದಿಮೆಗಳು ದೇಶದಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಂದ ಕಚ್ಚಾವಸ್ತುಗಳನ್ನು ಖರೀದಿಸುವಂತೆ ಸೂಚನೆ ನೀಡಲು ಪ್ರಧಾನಿ ಅವರಿಗೆ ಮನವಿ ಸಲ್ಲಿಸಿದ್ದೇನೆ ಎಂದರು.

ಕೇಂದ್ರ ಸರಕಾರ ನೀತಿ ನಿರೂಪಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದೇ ರೀತಿಯಲ್ಲಿ ಆಯಾ ರಾಜ್ಯಗಳು ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುತ್ತವೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಮಧ್ಯೆ ಅಗತ್ಯ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ಆಯೋಜಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ. ಈಗಾಗಲೇ ಕಾರ್ಮಿಕ ಇಲಾಖೆಯಲ್ಲಿ ಈ ರೀತಿಯ ಸಭೆಯನ್ನು ನಡೆಲಾಗುತ್ತಿದೆ ಎಂದು ಹೇಳಿದರು.

ಎಫ್‌ಕೆಸಿಸಿಐ ಅಧ್ಯಕ್ಷರಾದ ರಮೇಶ್ ಚಂದ್ರ ಲಹೋಟಿ ಮಾತನಾಡಿ, ಎರಡು ದಿನಗಳ ಕಾಲ ನಡೆಯಲಿರುವ ಈ ಸಮ್ಮೇಳನದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸ್ಥಾಪನೆಗೆ ಹಾಗೂ ಅವುಗಳ ಅಭಿವೃದ್ದಿಗೆ ಅಗತ್ಯವಿರುವ ಮಾಹಿತಿಯನ್ನು ಪಡೆಯುವಂತಹ ವೇದಿಕೆ ಒದಗಿಸಲಾಗಿದೆ. ಎಂಎಸ್‌ಎಂಇ ಗಳು ನಮ್ಮ ಕೈಗಾರಿಕಾ ಕ್ಷೇತ್ರದ ಬುನಾದಿಯಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಈ ಕೈಗಾರಿಕೆಗಳ ಅಭಿವೃದ್ದಿಗೆ ಹಲವಾರು ಯೋಜನೆಗಳನ್ನು ರೂಪಿಸಿವೆ ಎಂದರು.

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳು ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಅರ್ಥಪೂರ್ಣವಾಗಿ ಕೊಡುಗೆ ನೀಡುವ ವಾತಾವರಣವನ್ನು ಸೃಷ್ಟಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಹಾಗೆಯೇ, ರಾಷ್ಟ್ರೀಯ ಮತ್ತು ಜಾಗತಿಕ ಹಂತಗಳಲ್ಲಿ ತಮ್ಮ ಸೇವೆಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಸಣ್ಣ ಉದ್ಯಮಗಳನ್ನು ಸಶಕ್ತಗೊಳಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಎಫ್‌ಕೆಸಿಸಿಐ ಪ್ರಸಿಡೆಂಟ್ ಎಲೆಕ್ಟ್ ಎಂ.ಜಿ ಬಾಲಕೃಷ್ಣ, ಹಿರಿಯ ಉಪಾಧ್ಯಕ್ಷರಾದ ಉಮಾ ರೆಡ್ಡಿ, ಎಫ್‌ಕೆಸಿಸಿಐ ಇಂಡಸ್ಟ್ರಿ ಕಮಿಟಿ ಅಧ್ಯಕ್ಷರಾದ ಅರವಿಂದ ಬುರ್ಜಿ, ಕಾಸಿಯಾ ಅಧ್ಯಕ್ಷರಾದ ಎಂ.ಜಿ ರಾಜಗೋಪಾಲ್, ಪೀಣ್ಯ ಇಂಡಸ್ಟ್ರಿಯ ಅಸೋಸಿಯೇಷನ್ ಅಧ್ಯಕ್ಷರಾದ ಶಿವಕುಮಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net