

ಶಿರಸಿ: ಅಡಕೆ ಬೆಳೆಗಾರರ ಸಮಸ್ಯೆಗಳನ್ನು ಕೂಲಂಕಷವಾಗಿ ಚರ್ಚಿಸಲು ಮತ್ತು ಸೂಕ್ತ ಪರಿಹಾರ ಕಂಡುಕೊಳ್ಳಲು ರಾಜ್ಯದ ಅಡಕೆ ಬೆಳೆಯುವ ಪ್ರದೇಶಗಳ ಸಂಸದರು ಮತ್ತು ಅಡಕೆ ಬೆಳೆಗಾರರ ಸಂಘಟನೆಗಳ ಪ್ರತಿನಿಧಿಗಳನ್ನು ಒಳಗೊಂಡ ಮಹತ್ವದ ಸಭೆಯನ್ನು ಆಯೋಜಿಸಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೇಂದ್ರ ಕೃಷಿ ಸಚಿವ ಶಿವರಾಜಸಿಂಗ್ ಚೌಹಾಣ ಅವರಲ್ಲಿ ಮನವಿ ಮಾಡಿದ್ದಾರೆ.
ಮಂಗಳವಾರ ದೆಹಲಿಯಲ್ಲಿ ಅವರನ್ನು ಭೇಟಿ ಮಾಡಿದ ಕಾಗೇರಿ, ಜಿಲ್ಲೆಯ ಅಡಕೆ ಬೆಳೆಗಾರರಿಗೆ ದೊರೆಯಬೇಕಾಗಿದ್ದ ಹವಾಮಾನ ಆಧಾರಿತ ಬೆಳೆ ವಿಮೆಯನ್ನು ಒದಗಿಸಿದ್ದಕ್ಕಾಗಿ ಬೆಳೆಗಾರರ ಪರವಾಗಿ ಸಚಿವರನ್ನು ಸನ್ಮಾನಿಸಿ ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಮಳೆ ಮಾಪನ ಯಂತ್ರಗಳ ನಿರ್ವಹಣೆಯಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಲು ಇನ್ನೂ ಮುಂದಾಗಿಲ್ಲ. ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೇಂದ್ರ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಮನವಿಯಲ್ಲಿ ಮಳೆ ಮಾಪನ ಯಂತ್ರಗಳ ಸಮರ್ಪಕ ಕಾರ್ಯನಿರ್ವಹಣೆ ಹವಾಮಾನ ಆಧಾರಿತ ಬೆಳೆ ವಿಮೆಯಂತಹ ಯೋಜನೆಗಳ ಯಶಸ್ಸಿಗೆ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಹಸ್ತಕ್ಷೇಪವು ರಾಜ್ಯದಲ್ಲಿನ ಮಳೆ ಮಾಪನ ವ್ಯವಸ್ಥೆಯನ್ನು ಸುಧಾರಿಸಲು ಸಹಕಾರಿಯಾಗಲಿದೆ ಎಂದು ವಿನಂತಿಸಿದ್ದಾರೆ.