ಅರಕಲಗೂಡು: ಅನರ್ಹರು ಬಿಪಿಎಲ್ ಪಡಿತರ ಚೀಟಿ ಹಿಂದಿರುಗಿಸಬೇಕು ಎಂದು ತಹಸೀಲ್ದಾರ್ ಕೆ.ಸಿ.ಸೌಮ್ಯಾ ಸೂಚಿಸಿದ್ದಾರೆ.
ಸರ್ಕಾರಿ ಕಾಯಂ ನೌಕರರು, ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು, ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಕುಟುಂಬಗಳು ಹಾಗೂ ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು, ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆ ಸ್ವಂತವಾಗಿ ಹೊಂದಿರುವ ಕುಟುಂಬಗಳುಳು ಮತ್ತು ಟ್ರ್ಯಾಕ್ಟರ್ ಇನ್ನಿತರ ಜೀವನೋಪಾಯಕ್ಕೆ ಉಪಯೋಗಿಸುತ್ತಿರುವ ವಾಹನಗಳನ್ನು ಹೊರತುಪಡಿಸಿ ನಾಲ್ಕು ಚಕ್ರ ವಾಹನ ಹೊಂದಿರುವವರು ಹಾಗೂ ಕುಟುಂಬದ ವಾರ್ಷಿಕ ಆದಾಯವು 1.20 ಲಕ್ಷ ರೂ. ಹೊಂದಿರುವ ಕುಟುಂಬಗಳು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅನರ್ಹರಾಗಿದ್ದಾರೆ.
ಈ ಮಾನದಂಡಗಳನ್ನು ಹೊಂದಿದ್ದು ಪಡಿತರ ಚೀಟಿ ಪಡೆದಿದ್ದರೆ ಹಿಂದಿರುಗಿಸಬೇಕು. ತಾವು ಪಡೆದ ಪಡಿತರ ಆಹಾರ ಧಾನ್ಯವನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುವುದು, ಖರೀದಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಮೊಕದ್ದಮ್ಮೆ ದಾಖಲಿಸಿ ಪಡಿತರ ಚೀಟಿ ರದ್ದುಪಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.