

ಬೆಂಗಳೂರು: ಅತ್ಯಾಚಾರ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದಲ್ಲಿ ಶಾಸಕ ಎಚ್.ಡಿ.ರೇವಣ್ಣಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ತೀರ್ಪು ಕಾಯ್ದಿರಿಸಿದೆ.
ಎಸ್‌ಐಟಿ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್, ಪ್ರಕರಣದಲ್ಲಿ ರೇವಣ್ಣ ಭಾಗಿಯಾಗಿರುವುದು ತನಿಖೆ ವೇಳೆ ಸಾಬೀತಾಗಿದೆ. ಸಂತ್ರಸ್ತೆಯೂ ತನಿಖಾಧಿಕಾರಿ ಮತ್ತು ನ್ಯಾಯಾಲಯದಲ್ಲಿ ರೇವಣ್ಣ ವಿರುದ್ಧದ ಹೇಳಿಕೆ ನೀಡಿದ್ದಾರೆ. ಈ ಆರೋಪ ದಾಖಲಿಸಿಕೊಂಡ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ರದ್ದುಪಡಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಆಕ್ಷೇಪಿಸಿದ ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್, ಜಾಮೀನು ಮಂಜೂರು ಮಾಡುವುದು ಮತ್ತು ರದ್ದುಪಡಿಸುವ ಪ್ರಕ್ರಿಯೆ ಎರಡು ವಿಭಿನ್ನವಾಗಿರಲಿದೆ. ಅಲ್ಲದೆ, ಈ ಪ್ರಕರಣದಲ್ಲಿ ರೇವಣ್ಣ ಪಾತ್ರವಿಲ್ಲ. ಆದರೆ, ಸಂತ್ರಸ್ತೆಯನ್ನು ಅಪಹರಣ ಮಾಡಿದ್ದ ಸತೀಶ್ ಬಾಬಣ್ಣ ಎಂಬುವರು ರೇವಣ್ಣ ನಿಮ್ಮನ್ನು ಕರೆದುಕೊಂಡು ಬರುವುದಕ್ಕೆ ಹೇಳಿದ್ದಾರೆ ಎಂದು ತಿಳಿಸಿದ್ದಾರೆ ಎಂಬ ಆರೋಪವಿದೆ. ಇದು ಶಿಕ್ಷಾರ್ಹ ಅಪರಾಧವಲ್ಲ, ಹಾಗಾಗಿ ಅರ್ಜಿ ವಜಾಗೊಳಿಸಬೇಕು ಎಂದು ಮನವಿ ಮಾಡಿದರು.