

ಬೆಂಗಳೂರು: ದ್ವಿಚಕ್ರ ವಾಹನ ಹಾಗೂ ಪ್ಯಾಸೆಂಜರ್ ಆಟೋ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯ ಕೂಡ್ಲು ಸಮೀಪ ನಡೆದಿದೆ.
ಕೂಡ್ಲು ನಿವಾಸಿ ಹರೀಶ್ ಬಾಬು(೨೬) ಮೃತ ಸವಾರ. ಖಾಸಗಿ ಕಂಪನಿ ಉದ್ಯೋಗಿ ಹರೀಶ್ ಬಾಬು ಭಾನುವಾರ ತಡರಾತ್ರಿ ೧೨.೩೦ರ ಸುಮಾರಿಗೆ ಕೂಡ್ಲು ಗ್ರಾಮದ ವಿಜಿಪಿ ಲೇಔಟ್ ಬಳಿ ಬರುವಾಗ ಎದುರಿನಿಂದ ವೇಗವಾಗಿ ಬಂದ ಪ್ಯಾಸೆಂಜರ್ ಆಟೋ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದ ಹರೀಶ್ ಬಾಬು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಹೆಲ್ಮೆಟ್ ಧರಿಸಿದ್ದರೂ ತಲೆಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದ್ದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮುಂಜಾನೆ ಮೃತಪಟ್ಟಿದ್ದಾರೆ.
ಆಟೋ ಚಾಲಕನ ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆಟೋವನ್ನು ಜಪ್ತಿ ಮಾಡಿದ್ದು, ಚಾಲಕ ಮುತ್ತುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.