ಗ್ರಾಮೀಣ ಕಲೆಗಳಿಗೆ ಪ್ರೋತ್ಸಾಹ ಅಗತ್ಯ

pratibha kaaranji
ಸಾಗರ ತಾಲೂಕಿನ ಗಿಣಿವಾರ ಕೊಡಚಾದ್ರಿ ಆಂಗ್ಲಮಾಧ್ಯಮ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು. ಜಿ.ವಿ.ನವೀನ್, ಗಣಪತಿ ಮಂಡಗಳಲೆ, ಸುಧಾ ಗಂಗಾಧರ್, ಡಾ.ಅನ್ನಪೂರ್ಣ, ಭೂಮೇಶ್ ಇನ್ನಿತರರಿದ್ದರು.
Published on

ಸಾಗರ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವಿಶೇಷ ಪ್ರಾಮುಖ್ಯತೆ ನೀಡಬೇಕು. ಮಕ್ಕಳ ಕಲಿಕೆಯ ಜತೆಗೆ ಸಾಂಸ್ಕೃತಿಕ ಅಭಿರುಚಿ ಬೆಳೆಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಶಿಕ್ಷಣ ಇಲಾಖೆಯಿಂದ ಗಿಣಿವಾರ ಕೊಡಚಾದ್ರಿ ಆಂಗ್ಲಮಾಧ್ಯಮ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ನಿರಂತರವಾಗಿ ಲವಲವಿಕೆಯಿಂದ ಇರುವಂತೆ ಮಾಡಬೇಕು. ಗ್ರಾಮೀಣ ಭಾಗದ ಕಲೆಗಳನ್ನು ಉಳಿಸಿ, ಬೆಳೆಸುವ ಕಾರ್ಯ ಆಗಬೇಕು. ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಗ್ರಾಮೀಣ ಪ್ರದೇಶದಲ್ಲಿ ಆಯೋಜಿಸಿರುವುದು ಶ್ಲಾಘನೀಯ ಎಂದರು.

ಮಕ್ಕಳ ಬೆಳವಣಿಗೆಗೆ ಶಿಕ್ಷಕರು ಹಾಗೂ ಪಾಲಕರು ಸೂಕ್ತ ಮಾರ್ಗದರ್ಶನ ನೀಡುತ್ತಿರಬೇಕು. ಸಾಹಿತ್ಯ ಹಾಗೂ ಸಾಂಸ್ಕೃತಿಕವಾಗಿ ಮಲೆನಾಡು ಅತ್ಯಂತ ಶ್ರೀಮಂತವಾಗಿದ್ದು, ಇಲ್ಲಿನ ಪರಂಪರೆಯನ್ನು ಬಿಂಬಿಸುತ್ತದೆ. ಮಲೆನಾಡು ಭಾಗದಲ್ಲಿ ಸಾಕಷ್ಟು ಕಲಾ ಪ್ರಕಾರಗಳಿವೆ. ಅಂತಹ ಕಲೆಗಳನ್ನು ಮಕ್ಕಳಿಗೆ ಕಲಿಸುವ ಕೆಲಸ ಆಗಬೇಕು. ಹಾಗಾಗಿ ನಿರಂತರವಾಗಿ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರತೆ ಕಾಪಾಡಿಕೊಳ್ಳಲಿ ಎಂದು ಹೇಳಿದರು.

ಬಿಇಒ ಪರಶುರಾಮಪ್ಪ ಮಾತನಾಡಿ, ಮಕ್ಕಳ ಕಲಿಕೆಗೆ ಪೂರಕವಾದ ಅನೇಕ ಕಾರ್ಯಕ್ರಮಗಳಿವೆ. ವಿಶೇಷವಾಗಿ ಪ್ರತಿಭಾ ಕಾರಂಜಿಯಿಂದ ಮಕ್ಕಳಲ್ಲಿ ಸ್ಫೂರ್ತಿ ಇಮ್ಮಡಿಯಾಗುತ್ತದೆ. ಶಾಲೆಗಳಲ್ಲಿ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಕೋಳೂರು ಗ್ರಾಪಂ ಅಧ್ಯಕ್ಷ ಜಿ.ವಿ.ನವೀನ್, ನಗರಸಭೆ ಸದಸ್ಯ ಗಣಪತಿ ಮಂಡಗಳಲೆ, ಬಕರ್‌ಹುಕುಂ ಸಮಿತಿ ಸದಸ್ಯೆ ಸುಧಾ ಗಂಗಾಧರ್, ಸಮನ್ವಯಾಧಿಕಾರಿ ಡಾ. ಅನ್ನಪೂರ್ಣ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಭೂಮೇಶ್, ದೈಹಿಕ ಶಿಕ್ಷಣ ಪರಿವೀಕ್ಷಕ ರಮೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮಾಲತೇಶಪ್ಪ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಲಕ್ಷ್ಮಣ್ ಆರ್ ನಾಯ್ಕ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಬಲೇಶ್ವರ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುಬ್ರಮಣ್ಯ ಟಿ.ಪಿ, ಪದವೀಧರ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಕವಿರಾಜ್ ಬಿ.ಜಿ, ಅನುದಾನಿತ ಪ್ರೌಢಶಾಲೆ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಆರ್.ಮಂಜಪ್ಪ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷೆ ಪಾರ್ವತಿ, ಪಿಡಿಒ ಸುಹಾಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net