

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿ.ಎ.ಎ) ವಿರೋಧಿಸಿ ಪ್ರತಿಭಟನೆಯ ಹೆಸರಿನಲ್ಲಿ ಪ್ರಚೋದಾತ್ಮಕ ಹೇಳಿಕೆ ನೀಡಿರುವ ಆರೋಪದ ಮೇಲೆ ಬಂಧಿಯಾಗಿರುವ ಸಾಮಾಜಿಕ ಕಾರ್ಯಕರ್ತ ಅಖಿಲ್ ಗೊಗೋಯ್ ಅವರಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಅಸ್ಸಾಂನಲ್ಲಿ ನಡೆದ ಪ್ರತಿಭಟನೆಯಲ್ಲಿ ಇವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಜಾಮೀನು ನೀಡಲಾಗದ ಎಂದು ನ್ಯಾಯಮೂರ್ತಿಗಳಾದ ಎನ್.ವಿ.ರಮಣ, ಸೂರ್ಯ ಕಾಂತ್ ಮತ್ತು ಅನಿರುದ್ಧ ಬೋಸ್ ಅವರಿದ್ದ ಪೀಠ ಹೇಳಿದೆ.
ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಇವರ ಪಾತ್ರವಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ಆರೋಪಿಸಿತ್ತು. ಈ ಆರೋಪದ ಮೇಲೆ ಇವರನ್ನು ಬಂಧಿಸಲಾಗಿದೆ. 2019ರ ಡಿಸೆಂಬರ್ನಿಂದ ಇವರು ಬಂಧನದಲ್ಲಿದ್ದಾರೆ. ಜಾಮೀನು ಕೋರಿ ಇವರು ಈ ಹಿಂದೆ ಗೋಹಾಟಿ ಹೈಕೋರ್ಟ್ ಮೊರೆ ಹೋಗಿದ್ದರು.
ಆದರೆ ಇದು ಗಂಭೀರವಾಗಿರುವ ಆರೋಪ ಇರುವ ಹಿನ್ನೆಲೆಯಲ್ಲಿ ಜಾಮೀನು ನೀಡಲಾಗದು ಎಂದು ಹೈಕೋರ್ಟ್ ಹೇಳಿತ್ತು. ಇದನ್ನು ಅವರು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಈಗಲೂ ಅವರಿಗೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.
ಕೆಲವು ಕಡೆಗಳಲ್ಲಿ ಪ್ರತಿಭಟನೆ ಹಿಂಸೆಯ ರೂಪ ಪಡೆದದ್ದು ನಿಜ. ಪ್ರತಿಭಟನೆಯ ಹೆಸರಿನಲ್ಲಿ ಕೆಲವು ಕಿಡಿಗೇಡಿಗಳು ಕೃತ್ಯ ಮಾಡಿದ್ದೂ ನಿಜ. ಆದರೆ ಇದರಲ್ಲಿ ಗೊಗೋಯ್ ಅವರ ಪಾತ್ರವಿಲ್ಲ. ಇವರನ್ನು ವಿನಾಕಾರಣ ಬಂಧಿಸಲಾಗಿದೆ ಎಂದು ಅವರ ಪರ ವಕೀಲರು ವಾದಿಸಿದರು. ಆದರೆ ಈ ಹಂತದಲ್ಲಿ ಈ ಅರ್ಜಿಯನ್ನು ಮಾನ್ಯ ಮಾಡಲು ಆಗದು ಎಂದು ಕೋರ್ಟ್ ಹೇಳಿದೆ.