

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ, ಕವಿ, ನಾಟಕಕಾರ, ಸಂಘಟನಕಾರ, ಕನ್ನಡ ಹೋರಾಟಗಾರ ಹೀಗೆ ವಿಭಿನ್ನ ನೆಲೆಗಳ ಚಂದ್ರಶೇಖರ ಪಾಟೀಲ್ (ಚಂಪಾ) ಅವರು ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.
ಇವರಿಗೆ 82 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ನಿಮಿತ್ತ ಅವರನ್ನು ಬೆಂಗಳೂರಿನ ಕೋಣನಕುಂಟೆ ಆಸ್ಟ್ರಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ಅವರು ನಿಧನರಾಗಿರುವುದಾಗಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಷಿ ತಿಳಿಸಿದ್ದಾರೆ. ಅವರ ನಿವಾಸಕ್ಕೆ ಕೆಲಹೊತ್ತಿನಲ್ಲೇ ಪಾರ್ಥಿವ ಶರೀರವನ್ನು ತರಲಾಗುತ್ತದೆ ಎಂದು ಅಪ್ತ ವಲಯ ತಿಳಿಸಿದೆ.
ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್ 18ರಂದು ಜನಿಸಿದ್ದ ಚಂದ್ರಶೇಖರ್ ಪಾಟೀಲ್ ಅವರು ಸಾಹಿತ್ಯ ಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತರು. ಪಾಟೀಲರ ಪ್ರಾರಂಭಿಕ ಶಿಕ್ಷಣ ಹಾವೇರಿಯಲ್ಲಿ ಮತ್ತು ಪ್ರೌಢಶಿಕ್ಷಣ ಧಾರವಾಡದಲ್ಲಿ ನೆರವೇರಿತು.
ಇವರ ತಂದೆಯವರಿಗೆ ಇಂಗ್ಲಿಷ್ ಬಗ್ಗೆ ಅಭಿಮಾನವಿದ್ದುದರಿಂದ ಅದರಿಂದ ಪ್ರೇರಿತರಾಗಿ ಇಂಗ್ಲಿಷ್ ಎಂ.ಎ. ಪದವಿ ಗಳಿಸಿದರು. ಇದಲ್ಲದೆ ಬ್ರಿಟಿಷ್ ಕೌನ್ಸಿಲ್ ವಿದ್ಯಾರ್ಥಿವೇತನ ಪಡೆದು ಇಂಗ್ಲೆಂಡಿನ ಲೀಡ್ಸ್ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್ ಸಂಸ್ಥೆಯಿಂದ ಇಂಗ್ಲಿಷ್ ಅಧ್ಯಯನದ ಡಿಪ್ಲೋಮಾ ಪಡೆದರು. ಶಿಕ್ಷಣದ ಪ್ರತಿ ಹಂತದಲ್ಲಿಯೂ ಆಗ್ರ ಶ್ರೇಯಾಂಕ ಗಳಿಸಿದ ಕೀರ್ತಿ ಅವರದ್ದಾಗಿತ್ತು.
ಎಡಪಂಥೀಯ ರಾಜಕೀಯ ಸಿದ್ಧಾಂತಗಳಿಗೆ ಬದ್ಧವಾಗಿರುವ ಲೋಹಿಯಾವಾದಿ 'ಚಂಪಾ' ಅವರು ತುರ್ತುಪರಿಸ್ಥಿತಿಯ ದಿನಗಳಲ್ಲಿ, ಅದನ್ನು ಪ್ರತಿಭಟಿಸಿ, ಜೆ.ಪಿ. ಚಳುವಳಿ ಬೆಂಬಲಿಸಿ ಜೈಲುವಾಸ ಅನಿಭವಿಸಿದ್ದಾರೆ. ಗೋಕಾಕ್ ಚಳುವಳಿಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ಅವರು ಕರ್ನಾಟಕದ ಭಾಷಾ ಚಳುವಳಿಯಲ್ಲಿ ಸಕ್ರಿಯ ಪಾತ್ರವಹಿಸುತ್ತಿದ್ದಾರೆ.
ಬಾನು (ಕಾವ್ಯ-೧೯೬0) ಕಾವ್ಯಕ್ಕೆ ಗೋಕರ್ಣದ ಗೌಡಶಾನಿ (ನಾಟಕ-೧೯೭೪), ಗಾಂಧೀಸ್ಮರಣ (ಕಾವ್ಯ-೧೯೭೬) ಇವುಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಗ್ರಂಥ ಪ್ರಶಸ್ತಿಗಳು ದೊರೆತಿವೆ. ಕರ್ನಾಟಕ ಸಾಹಿತ್ಯ ಅಕಾಡೆಮಿ, ಕರ್ನಾಟಕ ನಾಟಕ ಅಕಾಡೆಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಸಂದೇಹ ಮಾಧ್ಯಮ ಪ್ರಶಸ್ತಿ ಇತ್ಯಾದಿ ಇವರಿಗೆ ಲಭ್ಯವಾಗಿವೆ. ದಿನಕರ ದೇಸಾಯಿ ಪ್ರಶಸ್ತಿ ಇವರ ಅರ್ಧಸತ್ಯದ ಹುಡುಗಿ ಕಾವ್ಯಕ್ಕೆ ದೊರೆತಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎ ಬಿ.ಎಸ್.ಯಡಿಯೂರಪ್ಪ ಸಂತಾಪ:
ಚಂಪಾ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ. ‘ಚಂಪಾ ಒಬ್ಬ ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ. ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಾಗಿ ನಿಂತವರು. ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮ ಕಲಿಕೆಗೆ ಒತ್ತು ನೀಡಿದರು’ ಎಂದು ಚಂಪಾ ಅವರನ್ನು ಸಿಎಂ ಬಣ್ಣಿಸಿದ್ದಾರೆ. ಕನ್ನಡದ ಕವಿ, ನಾಟಕಕಾರ, ವಿಮರ್ಶಕ, ಹೋರಾಟಗಾರ, ಚಂಪಾ ಎಂದೇ ಖ್ಯಾತರಾಗಿದ್ದ ಚಂದ್ರಶೇಖರ ಪಾಟೀಲ ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ನಾಡು ಒಬ್ಬ ಹಿರಿಯ ಕನ್ನಡದ ಧ್ವನಿಯನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು, ಕುಟುಂಬದವರಿಗೆ, ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ. ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.