

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿಯವರಿಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ಜಾರಿ ಮಾಡಿದೆ. ನೋಟಿಸ್ ಜಾರಿಯಾಗುತ್ತಿದ್ದಂತೆಯೇ ಸೋನಿಯಾಗಾಂಧಿಯವರಿಗೆ ಕರೊನಾ ಸೋಂಕು ಕಾಣಿಸಿಕೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ರಾಹುಲ್ ಅವರ ವಿಚಾರಣೆಯನ್ನು ಇಂದು ಮೂರನೆಯ ದಿನ ಇ.ಡಿ. ಅಧಿಕಾರಿಗಳು ಮುಂದುವರೆಸಿದ್ದಾರೆ.
ವಿಚಾರಣೆಗೆ ಹಾಜರಾಗುವ ಮುನ್ನ ರಾಹುಲ್ ಗಾಂಧಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ಭೇಟಿ ನೀಡಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ನಂತರ ಜಾರಿ ನಿರ್ದೇಶನಾಲಯದ ಪ್ರಧಾನ ಕಚೇರಿಯತ್ತ ಪ್ರಯಾಣ ಬೆಳೆಸಿದರು.
ಬೆಳಗ್ಗೆ 11.30ಕ್ಕೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾದರು. ಈ ವೇಳೆ ಅಪಾರ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಯಕರು ರಾಹುಲ್ ಗಾಂಧಿ ಅವರಿಗೆ ಸಾಥ್ ನೀಡಿದರು. ಇದೇ ವೇಳೆ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಹಲವು ಕಾರ್ಯಕರ್ತರು ಪೊಲೀಸರ ಜತೆ ವಾಗ್ಯುದ್ಧ ಸಾರಿದ್ದಾರೆ.
ಒಳಗಡೆ ರಾಹುಲ್ ಗಾಂಧಿಯವರ ವಿಚಾರಣೆ ನಡೆಯುತ್ತಿದ್ದರೆ, ಇಂದು ಕೂಡ ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಹೈಡ್ರಾಮಾ ಮುಂದುವರೆದಿದೆ. ಟೈಯರ್ಗಳಿಗೆ ಬೆಂಕಿ ಹಚ್ಚಿ, ಬಟ್ಟೆಗಳನ್ನು ಹರಿದುಕೊಂಡು ಗಲಾಟೆ ಮಾಡುತ್ತಿದ್ದಾರೆ. ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಈ ಕುರಿತಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ನಾವೇನು ಭಯೋತ್ಪಾದಕರೇ? ನಮ್ಮ ಬಗ್ಗೆ ಭಯ ಏಕೆ? ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸ್ ಬಲ ಏಕೆ ಬಳಕೆ ಮಾಡ್ತಿದ್ದೀರಿ? ಎಂದು ಕಿಡಿಕಾರಿದ್ದಾರೆ. ರಾಹುಲ್ ಗಾಂಧಿಯನ್ನು 10 ಗಂಟೆಗಳ ಕಾಲ ಪ್ರಶ್ನಿಸುವ ಅಗತ್ಯವೇನಿದೆ? ಅವರನ್ನೇಕೆ 10 ದಿನಗಳ ಕಾಲ ಪ್ರಶ್ನಿಸಲಾಯಿತು? ಅವರ ತಪ್ಪಾದರೂ ಏನಿದೆ? ಎಂದು ಕೈ ನಾಯಕರು ಪ್ರಶ್ನಿಸುತ್ತಿದ್ದಾರೆ.
ಅಕ್ಬರ್ ರಸ್ತೆಯಲ್ಲಿನ ಕಾಂಗ್ರೆಸ್ ಕಚೇರಿ ಎದುರು ಭಾರೀ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಯಕರು ಸೇರಿದ್ದಾರೆ. ಪೊಲೀಸರು ಪ್ರತಿಭಟನಾ ನಿರತ ಹಲವು ನಾಯಕರನ್ನು ವಶಕ್ಕೆ ಪಡೆದಿದ್ದಾರೆ. ಇಷ್ಟಾದರೂ ಪ್ರತಿಭಟನೆ ನಿಯಂತ್ರಣಕ್ಕೆ ಬರುತ್ತಿಲ್ಲ. ಪೊಲೀಸರು ಮಹಿಳಾ ಕಾರ್ಯಕರ್ತರನ್ನು ಎಳೆದೊಯ್ಯುವಾಗ ರಾಹುಲ್ ಗಾಂಧಿ ಜಿಂದಾಬಾದ್ ಎಂದು ಕೂಗಿದ್ದು, ಇದರ ವಿಡಿಯೋ ವೈರಲ್ ಆಗಿದೆ. ಟ್ವಿಟ್ಟರ್‌ನಲ್ಲೂ ಆಕ್ರೋಶ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ನಾಯಕರು, ಶಾಂತಿಯುತ ಪ್ರತಿಭಟನೆ ಹತ್ತಿಕ್ಕಲು ಪೊಲೀಸ್ ಬಲ ಪ್ರಯೋಗ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಏನಿದು ನ್ಯಾಷನಲ್ ಹೆರಾಲ್ಡ್ ಕೇಸ್?
ಜವಾಹರಲಾಲ್ ನೆಹರು ಮತ್ತು ಇತರ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಜತೆಗೂಡಿ 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಹುಟ್ಟುಹಾಕಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸ್ವತಂತ್ರ ದಳದ ಕಳವಳಗಳಿಗೆ ಧ್ವನಿಯಾಗುವುದು ಇದರ ಉದ್ದೇಶವಾಗಿತ್ತು. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಪ್ರಕಾಶನದ ಈ ಪತ್ರಿಕೆಯು, ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ಮುಖವಾಣಿಯಾಗಿತ್ತು.
2010ರಲ್ಲಿ ಕಾಂಗ್ರೆಸ್ ಪಕ್ಷದ ಆಗಿನ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಹುಲ್ ಗಾಂಧಿ ಯಂಗ್ ಇಂಡಿಯಾ ಲಿಮಿಟೆಡ್ ಸ್ಥಾಪಿಸಿದ್ದರು. ಈ ಕಂಪೆನಿಯು ಯಂಗ್ ಇಂಡಿಯಾ ಲಿಮಿಟೆಡ್ (ವೈಐಎಲ್), ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ನ ಷೇರುಗಳನ್ನು ಖರೀದಿ ಮಾಡುವಲ್ಲಿ ವಂಚನೆ ಹಾಗೂ ನಂಬಿಕೆ ದ್ರೋಹ ಎಸಗಿದೆ. ಇದರಲ್ಲಿ ಅನೇಕ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ ಎಂದು 2012ರಲ್ಲಿ ಬಿಜೆಪಿ ನಾಯಕ ಹಾಗೂ ವಕೀಲ ಸುಬ್ರಮಣಿಯನ್ ಸ್ವಾಮಿ ವಿಚಾರಣಾ ನ್ಯಾಯಾಲಯದಲ್ಲಿ ದೂರು ನೀಡಿದ್ದರು.
ಬಳಕೆಯಲ್ಲಿ ಇಲ್ಲದ ಮಾಧ್ಯಮ ಸಂಸ್ಥೆಯ ಆಸ್ತಿಗಳನ್ನು ಸ್ವಾಧೀನ ಪಡಿಸಿಕೊಂಡು ಸುಮಾರು 2 ಸಾವಿರ ಕೋಟಿ ರೂ ಲಾಭ ಹಾಗೂ ಆಸ್ತಿ ಸಂಪಾದಿಸಲು ಯಂಗ್ ಇಂಡಿಯಾ ಲಿ. ವಾಮಮಾರ್ಗ ಅನುಸರಿಸಿದೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದೆ.