

ಬೆಂಗಳೂರು: ರಾಜಕಾರಣಿಗಳು ಸೇರಿದಂತೆ ಗಣ್ಯವ್ಯಕ್ತಿಗಳ ಬೆನ್ನುಹತ್ತಿರುವ ಕರೊನಾ, ಅವರನ್ನು ಆವರಿಸಿಕೊಳ್ಳಲು ಶುರು ಮಾಡಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೇಂದ್ರ, ರಾಜ್ಯಗಳ ಹಲವಾರು ಸಚಿವರನ್ನು ಕರೊನಾ ಕಾಡಿದ್ದು, ಇನ್ನೂ ಕೆಲವರನ್ನು ಕಾಡತೊಡಗಿದೆ.
ಇದೀಗ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೂ ಕರೊನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ ಎಂದು ಅವರು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವ ಈಶ್ವರಪ್ಪ, ‘ಇಂದು ಕರೊನಾ ಸೋಂಕು ದೃಢಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.
ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಇವರ ಟ್ವೀಟ್‌ಗೆ ನೂರಾರು ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದು, ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸಿಸಿದ್ದಾರೆ.