

SL Bhyarappa: ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಸಾಹಿತಿ, ಪದ್ಮಭೂಷಣ ಗೌರವ ಪುರಸ್ಕೃತ ಎಸ್.ಎಲ್. ಭೈರಪ್ಪ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ (ಸೆ.26) ಇಹಲೋಕ ತ್ಯಜಿಸಿದ್ದಾರೆ.
ಕನ್ನಡ ಸಾಹಿತ್ಯದ ಅತ್ಯುನ್ನತ ವ್ಯಕ್ತಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಎಸ್.ಎಲ್.ಭೈರಪ್ಪ ಅವರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ರಾಷ್ಟ್ರಪತಿ, '' ಕನ್ನಡ ಸಾಹಿತ್ಯದ ಅತ್ಯುನ್ನತ ವ್ಯಕ್ತಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಎಸ್. ಎಲ್. ಭೈರಪ್ಪ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ಸಾಹಿತ್ಯ, ತತ್ವಶಾಸ್ತ್ರ, ಸಂಸ್ಕೃತಿ ಮತ್ತು ಬೌದ್ಧಿಕ ವಿಚಾರಣಾ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ'' ಎಂದಿದ್ದಾರೆ.
ಎಸ್.ಎಲ್.ಭೈರಪ್ಪ ಅವರು ತಮ್ಮ ಕೃತಿಗಳ ಮೂಲಕ ಕನ್ನಡ ಸಾಹಿತ್ಯವನ್ನು ರಾಷ್ಟ್ರೀಯ ಮತ್ತು ಜಾಗತಿಕ ಪ್ರಾಮುಖ್ಯತೆಗೆ ತಂದರು ಮತ್ತು ಅದರ ಸಾಂಸ್ಕೃತಿಕ ಬೇರುಗಳಿಗೆ ನಿಷ್ಠರಾಗಿದ್ದರು. ಅವರ ಪರಂಪರೆ ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ. ಅವರ ಕುಟುಂಬ, ಅಭಿಮಾನಿಗಳು ಮತ್ತು ಅಸಂಖ್ಯಾತ ಓದುಗರಿಗೆ ನನ್ನ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ ಎಂದು ದ್ರೌಪದಿ ಮುರ್ಮು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಭೈರಪ್ಪ ಅವರಿಗೆ 94 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ತಿಂಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭೈರಪ್ಪ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.