ಗಾನಕೋಗಿಲೆ ಲತಾ ಮಂಗೇಶ್ಕರ್‌ ಸ್ಥಿತಿ ಗಂಭೀರ: ಐಸಿಯುನಲ್ಲಿ ಮುಂದುವರೆದ ಚಿಕಿತ್ಸೆ

Lata Mangeshkar
Published on

ಮುಂಬೈ: ಕರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ (92) ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದ್ದು, ಐಸಿಯುವಿನಲ್ಲಿ ಅವರ ಚಿಕಿತ್ಸೆ ಮುಂದುವರೆದಿದೆ.

ಕಳೆದೊಂದು ತಿಂಗಳಿನಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿರುವ ಲತಾ, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿರುವುದಾಗಿ ವೈದ್ಯರು ಹೇಳಿದ್ದರು. ಆದರೆ ಇದೀಗ ಪುನಃ ಆರೋಗ್ಯ ಸ್ಥಿತಿ ಹದಗೆಡುತ್ತಾ ಸಾಗಿರುವುದಾಗಿ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

2019ರಲ್ಲಿ ಉಸಿರಾಟದ ತೊಂದರೆ ಅಥವಾ ಎದೆಯ ದಟ್ಟಣೆ ಶ್ವಾಸಕೋಶದ ಕಾಯಿಲೆಯಿಂದಾಗಿ ಲತಾ ಮಂಗೇಶ್ಕರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚೇತರಿಸಿಕೊಂಡಿದ್ದರು. ಆದರೆ ಇದೀಗ ಲತಾ ಮಂಗೇಶ್ಕರ್ ಅವರಿಗೆ ಕರೊನಾ ಸೋಂಕು ತಗುಲಿದ್ದು, ಐಸಿಯುವಿನಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

1942 ರಲ್ಲಿ 13 ನೇ ವಯಸ್ಸಿನಲ್ಲಿ ಗಾಯನವನ್ನು ಶುರು ಮಾಡಿ ಅಲ್ಲಿಂದ ಇಲ್ಲಿಯವರೆಗೂ ವಿಶ್ವಖ್ಯಾತಿ ಗಳಿಸಿರುವ ಗಾಯಕಿ ಲತಾ. ಹಲವಾರು ಭಾರತೀಯ ಭಾಷೆಗಳಲ್ಲಿ 30 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು, 15 ಬಂಗಾಳ ಚಲನಚಿತ್ರ ಪತ್ರಕರ್ತರ ಸಂಘದ ಪ್ರಶಸ್ತಿಗಳು, ನಾಲ್ಕು ಫಿಲ್ಮ್‌ಫೇರ್ ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು, ಎರಡು ಫಿಲ್ಮ್‌ಫೇರ್ ವಿಶೇಷ ಪ್ರಶಸ್ತಿಗಳು, ಫಿಲ್ಮ್‌ಫೇರ್ ಜೀವಮಾನ ಸಾಧನೆ ಪ್ರಶಸ್ತಿ ಮತ್ತು ಅನೇಕ ಪುರಸ್ಕಾರಗಳನ್ನು ಗೆದ್ದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net