

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿಯೂ ಎಲ್‌ಕೆಜಿ, ಯುಕೆಜಿ ಆರಂಭಿಸಿದರೆ ಹೆಚ್ಚಿನವರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಾರೆ ಎಂಬ ಬಹು ವರ್ಷಗಳ ಕನಸನ್ನು ಈಗ ನನಸು ಮಾಡಲು ಸರ್ಕಾರ ಮುಂದಾಗಿದೆ.
ಬರುವ ಶೈಕ್ಷಣಿಕ ವರ್ಷದಿಂದಲೇ ಕರ್ನಾಟಕದ 276 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಶಿಕ್ಷಣ ಆರಂಭಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಹೇಳಿದ್ದಾರೆ.
ಈ ಕುರಿತು ಇಂದು ನಡೆದಿರುವ ಸಂಪುಟ ಸಭೆಯಲ್ಲಿ ತೀರ್ಮಾನಿಸಿರುವುದಾಗಿ ಅವರು ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟದಲ್ಲಿ ತೆಗೆದುಕೊಂಡಿರುವ ಹಲವಾರು ಮಹತ್ವದ ಮಾಹಿತಿಗಳ ಕುರಿತಾಗಿ ಮಾಧ್ಯಮಗಳ ಜತೆ ಮಾತನಾಡಿದ ಸಚಿವರು, ಸರ್ಕಾರ ಎಲ್‌ಕೆಜಿ, ಯುಕೆಜಿ ಆರಂಭದ ಕುರಿತು ಗಂಭೀರ ಚಿಂತನೆ ನಡೆಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಶಿಕ್ಷಣ ಆರಂಭಿಸಲಿದೆ ಎಂದಿದ್ದಾರೆ.
ಇದಕ್ಕೆ ಬೇಕಾಗಿರುವ ಎಲ್ಲ ಮೂಲಸೌಕರ್ಯಗಳನ್ನು ಸರ್ಕಾರ ಒದಗಿಸಲಿದ್ದು, ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಲಿದ್ದೇವೆ ಎಂದರು.