ಮೊಹಮ್ಮದ್​ ಪೈಗಂಬರ್ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಶಾಸಕ ರಾಜಾ ಸಿಂಗ್​ ಅರೆಸ್ಟ್​

arrest
Published on

ಹೈದರಾಬಾದ್: ಮೊಹಮ್ಮದ್ ಪೈಗಂಬರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪದ ಮೇಲೆ ತೆಲಂಗಾಣ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನಲ್ಲಿ ಸೋಮವಾರ ರಾತ್ರಿ ಶಾಸಕ ರಾಜಾ ಸಿಂಗ್ ಪ್ರವಾದಿ ಕುರಿತು ಮಾತನಾಡುವ ವಿಡಿಯೋವನ್ನು ಬಿಡುಗಡೆ ಮಾಡಿದ ನಂತರ ಪ್ರತಿಭಟನೆ ನಡೆದಿತ್ತು. ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟು ಮಾಡಿದ ಆರೋಪ ಇವರ ಮೇಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಮೊಹಮ್ಮದ್ ಪೈಗಂಬರ್ ವಿರುದ್ಧ ಹೇಳಿಕೆ ನೀಡಿದ್ದ ರಾಜಾ ಸಿಂಗ್ ವಿರುದ್ಧ ಹಲವಾರು ದೂರುಗಳು ದಾಖಲಾಗಿವೆ. ಅಷ್ಟೇ ಅಲ್ಲದೆ ಡಬೀರ್‌ಪುರ, ಭವಾನಿ ನಗರ, ರೈನ್‌ಬಜಾರ್‌, ಮೀರ್‌ಚೌಕ್‌ ಪೊಲೀಸ್ ಠಾಣೆಗಳ ಮುಂದೆ ಸಾವಿರಾರು ಸಂಖ್ಯೆಯಲ್ಲಿ ಜನತೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ಗೋಶಾಮಹಲ್ ಶಾಸಕ ರಾಜಾ ಸಿಂಗ್ ಅವರು ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ವೀಡಿಯೊವನ್ನು ಬಿಡುಗಡೆ ಮಾಡಿದ ನಂತರ ಸೋಮವಾರ ಮಧ್ಯರಾತ್ರಿ ಮತ್ತು ನಂತರ ಇಂದು ಬೆಳಿಗ್ಗೆ ನಗರ ಪೊಲೀಸ್ ಕಮಿಷನರ್ ಸಿವಿ ಆನಂದ್ ಅವರ ಕಚೇರಿ ಮತ್ತು ಪಟ್ಟಣದ ಇತರ ಭಾಗಗಳಲ್ಲಿ ಪ್ರತಿಭಟನೆಗಳು ನಡೆದವು. ರಾಜಾ ಸಿಂಗ್ ಅವರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದ್ದರು. ಈ ವಿಡಿಯೋದಲ್ಲಿ ರಾಜಾ ಸಿಂಗ್ ಅವರು ಹಾಸ್ಯನಟ ಮುನವ್ವರ್ ಫಾರೂಕಿ ಮತ್ತು ಅವರ ತಾಯಿಯ ಬಗ್ಗೆಯೂ ಕಾಮೆಂಟ್ ಮಾಡಿದ್ದಾರೆ ಎನ್ನಲಾಗಿದೆ.

ಭಾರಿ ಪ್ರತಿಭಟನೆ ಹಿನ್ನೆಲೆಯಲ್ಲಿ ಹೈದರಾಬಾದ್ ಪೊಲೀಸ್ ಆಯುಕ್ತರ ಕಚೇರಿ, ಲಕ್ಡಿಕಾಪುಲ್‌ನಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿ ಮತ್ತು ಪುರಾನಿ ಹವೇಲಿಯಲ್ಲಿರುವ ಹಳೆಯ ಪೊಲೀಸ್ ಕಮಿಷನರ್ ಕಚೇರಿ ಮತ್ತು ನಗರದ ಇತರ ಪ್ರಮುಖ ಸ್ಥಳಗಳ ಹೊರಗೆ ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net