

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ವರ್ಗಾವಣೆಯಲ್ಲಿ ಸಿಲುಕಿರುವ ಸಂಸದ ರಾಹುಲ್ ಗಾಂಧಿ ಇಂದು ಮತ್ತೆ ವಿಚಾರಣೆಗೆ ಹಾಜರು ಆಗಲಿದ್ದಾರೆ.
ಇದಾಗಲೇ ಮೂರು ಸುತ್ತಿನ ವಿಚಾರಣೆ ನಡೆದಿದೆ. ಇದೀಗ ನಾಲ್ಕನೇ ಸುತ್ತಿನ ವಿಚಾರಣೆಗೆ ರಾಹುಲ್ ಗಾಂಧಿ ಹೋಗಬೇಕಿದೆ. ಜೂನ್ 13 ರಿಂದ 15 ರವರೆಗೆ ವಿಚಾರಣೆ ನಡೆಸಿತ್ತು. ಸುಮಾರು 30 ಗಂಟೆಗಳಿಗೂ ಹೆಚ್ಚಿನ ಕಾಲ ಅವರನ್ನು ಪ್ರಶ್ನೆ ಮಾಡಿತ್ತು.
ನಂತರ ತಮ್ಮ ಹುಟ್ಟುಹಬ್ಬ ಹಾಗೂ ಆಸ್ಪತ್ರೆಯಲ್ಲಿರುವ ತಾಯಿ ಸೋನಿಯಾ ಗಾಂಧಿಯವರನ್ನು ನೋಡಿಕೊಳ್ಳಬೇಕಿರುವ ಹಿನ್ನೆಲೆಯಲ್ಲಿ ತಮಗೆ ಒಂದಿಷ್ಟು ಕಾಲಾವಕಾಶ ನೀಡುವಂತೆ ರಾಹುಲ್ ಕೋರಿದ್ದರು. ಅದರಂತೆಯೇ ಅಧಿಕಾರಿಗಳು ಮೂರು ದಿನಗಳ ಅವಕಾಶ ನೀಡಿದ್ದರು.
ಅಗ್ನಿಪಥ್ ಯೋಜನೆಗೆ ಸಂಬಂಧಿಸಿದಂತೆ ದೇಶದ ಕೆಲವೆಡೆ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಯೋಜನೆಯಿಂದ ಯುವಕರು ಸಂಕಷ್ಟದಲ್ಲಿ ಇದ್ದಾರೆ, ಆದ್ದರಿಂದ ತಮ್ಮ ಹುಟ್ಟುಹಬ್ಬ ಆಚರಣೆ ಬೇಡ ಎಂದು ರಾಹುಲ್ ಮನವಿ ಮಾಡಿಕೊಂಡಿದ್ದರು. ಆದ್ದರಿಂದ ಅವರ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿರಲಿಲ್ಲ.
ಇದೀಗ ಜಾರಿ ನಿರ್ದೇಶನಾಲಯ ನೀಡಿರುವ ಅವಧಿ ಮುಗಿದಿದ್ದು, ಇಂದು (ಸೋಮವಾರ) ಹಾಜರು ಆಗಬೇಕಿದೆ.
ಈ ಮಧ್ಯೆ ಸೋನಿಯಾ ಗಾಂಧಿ ಅವರು ಇನ್ನೂ ಆಸ್ಪತ್ರೆಯಲ್ಲಿ ಕರೊನಾ ಚಿಕಿತ್ಸೆ ಪಡೆಯುತ್ತಿದ್ದಾರೆ.
ಏನಿದು ನ್ಯಾಷನಲ್ ಹೆರಾಲ್ಡ್ ಕೇಸ್?
ಜವಾಹರಲಾಲ್ ನೆಹರು ಮತ್ತು ಇತರ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಜತೆಗೂಡಿ 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಹುಟ್ಟುಹಾಕಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸ್ವತಂತ್ರ ದಳದ ಕಳವಳಗಳಿಗೆ ಧ್ವನಿಯಾಗುವುದು ಇದರ ಉದ್ದೇಶವಾಗಿತ್ತು. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಪ್ರಕಾಶನದ ಈ ಪತ್ರಿಕೆಯು, ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ಮುಖವಾಣಿಯಾಗಿತ್ತು.
2010ರಲ್ಲಿ ಕಾಂಗ್ರೆಸ್ ಪಕ್ಷದ ಆಗಿನ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಹುಲ್ ಗಾಂಧಿ ಯಂಗ್ ಇಂಡಿಯಾ ಲಿಮಿಟೆಡ್ ಸ್ಥಾಪಿಸಿದ್ದರು. ಈ ಕಂಪೆನಿಯು ಯಂಗ್ ಇಂಡಿಯಾ ಲಿಮಿಟೆಡ್ (ವೈಐಎಲ್), ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ನ ಷೇರುಗಳನ್ನು ಖರೀದಿ ಮಾಡುವಲ್ಲಿ ವಂಚನೆ ಹಾಗೂ ನಂಬಿಕೆ ದ್ರೋಹ ಎಸಗಿದೆ. ಇದರಲ್ಲಿ ಅನೇಕ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ ಎಂದು 2012ರಲ್ಲಿ ಬಿಜೆಪಿ ನಾಯಕ ಹಾಗೂ ವಕೀಲ ಸುಬ್ರಮಣಿಯನ್ ಸ್ವಾಮಿ ವಿಚಾರಣಾ ನ್ಯಾಯಾಲಯದಲ್ಲಿ ದೂರು ನೀಡಿದ್ದರು.
ಬಳಕೆಯಲ್ಲಿ ಇಲ್ಲದ ಮಾಧ್ಯಮ ಸಂಸ್ಥೆಯ ಆಸ್ತಿಗಳನ್ನು ಸ್ವಾಧೀನ ಪಡಿಸಿಕೊಂಡು ಸುಮಾರು 2 ಸಾವಿರ ಕೋಟಿ ರೂ ಲಾಭ ಹಾಗೂ ಆಸ್ತಿ ಸಂಪಾದಿಸಲು ಯಂಗ್ ಇಂಡಿಯಾ ಲಿ. ವಾಮಮಾರ್ಗ ಅನುಸರಿಸಿದೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದ್ದು, ಜಾರಿ ನಿರ್ದೇಶನಾಲಯವು ರಾಹುಲ್ ಮತ್ತು ಸೋನಿಯಾ ಅವರಿಗೆ ನೋಟಿಸ್ ಜಾರಿ ಮಾಡಿ ಖುದ್ದು ಹಾಜರಿಗೆ ಆದೇಶಿಸಿದೆ