ಅಕ್ರಮ ಹಣ ವರ್ಗಾವಣೆ ಕೇಸ್​ನಲ್ಲಿ ಇಡಿ ಶಾಕ್​ ನೀಡಿದ ಬೆನ್ನಲ್ಲೇ ಸೋನಿಯಾಗೆ ಕೋವಿಡ್​ ಪಾಸಿಟಿವ್​!

sonia gandhi
Published on

ನವದೆಹಲಿ: ನ್ಯಾಷನಲ್​ ಹೆರಾಲ್ಡ್​ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ವಯನಾಡು ಸಂಸದ ರಾಹುಲ್​ ಗಾಂಧಿಗೆ ಜಾರಿ ನಿರ್ದೇಶನಾಲಯ (ಇಡಿ) ನಿನ್ನೆ (ಬುಧವಾರ) ನೋಟಿಸ್​ ಜಾರಿಗೊಳಿಸಿತ್ತು. ಜೂನ್​ 8ರಂದು ವಿಚಾರಣೆಗೆ ಹಾಜರಾಗುವಂತೆ ಅದರಲ್ಲಿ ಉಲ್ಲೇಖಿಸಲಾಗಿತ್ತು.

ಇದರ ಬೆನ್ನಲ್ಲೇ ಇಂದು ಸೋನಿಯಾ ಗಾಂಧಿ ಅವರಿಗೆ ಕರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ ಎಂದು ಕಾಂಗ್ರೆಸ್​ ಪಕ್ಷದ ಮುಖ್ಯ ವಕ್ತಾರ ರಣದೀಪ್​ ಸುರ್ಜೇವಾಲ ತಿಳಿಸಿದ್ದಾರೆ.

ವೈದ್ಯಕೀಯ ಸಲಹೆಯ ಮೇರೆಗೆ ಸೋನಿಯಾ ಅವರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಅವರಿಗೆ ಸಣ್ಣಮಟ್ಟಿನಲ್ಲಿ ಜ್ವರ ಇದ್ದು, ಶೀಘ್ರದಲ್ಲಿ ಗುಣಮುಖವಾಗುತ್ತಾರೆ ಎಂದು ನಾವು ಭಾವಿಸುತ್ತೇವೆ. ಅವರನ್ನು ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸುತ್ತೇವೆ ಎಂದು ಸುರ್ಜೇವಾಲ ಹೇಳಿದ್ದಾರೆ.

ಏನಿದು ನ್ಯಾಷನಲ್​ ಹೆರಾಲ್ಡ್​ ಕೇಸ್​?

ಜವಾಹರಲಾಲ್ ನೆಹರು ಮತ್ತು ಇತರ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಜತೆಗೂಡಿ 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಹುಟ್ಟುಹಾಕಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸ್ವತಂತ್ರ ದಳದ ಕಳವಳಗಳಿಗೆ ಧ್ವನಿಯಾಗುವುದು ಇದರ ಉದ್ದೇಶವಾಗಿತ್ತು. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಪ್ರಕಾಶನದ ಈ ಪತ್ರಿಕೆಯು, ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ಮುಖವಾಣಿಯಾಗಿತ್ತು.

2010ರಲ್ಲಿ ಕಾಂಗ್ರೆಸ್ ಪಕ್ಷದ ಆಗಿನ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಹುಲ್ ಗಾಂಧಿ ಯಂಗ್ ಇಂಡಿಯಾ ಲಿಮಿಟೆಡ್ ಸ್ಥಾಪಿಸಿದ್ದರು. ಈ ಕಂಪೆನಿಯು ಯಂಗ್ ಇಂಡಿಯಾ ಲಿಮಿಟೆಡ್ (ವೈಐಎಲ್), ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ನ ಷೇರುಗಳನ್ನು ಖರೀದಿ ಮಾಡುವಲ್ಲಿ ವಂಚನೆ ಹಾಗೂ ನಂಬಿಕೆ ದ್ರೋಹ ಎಸಗಿದೆ. ಇದರಲ್ಲಿ ಅನೇಕ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ ಎಂದು 2012ರಲ್ಲಿ ಬಿಜೆಪಿ ನಾಯಕ ಹಾಗೂ ವಕೀಲ ಸುಬ್ರಮಣಿಯನ್ ಸ್ವಾಮಿ ವಿಚಾರಣಾ ನ್ಯಾಯಾಲಯದಲ್ಲಿ ದೂರು ನೀಡಿದ್ದರು.

ಬಳಕೆಯಲ್ಲಿ ಇಲ್ಲದ ಮಾಧ್ಯಮ ಸಂಸ್ಥೆಯ ಆಸ್ತಿಗಳನ್ನು ಸ್ವಾಧೀನ ಪಡಿಸಿಕೊಂಡು ಸುಮಾರು 2 ಸಾವಿರ ಕೋಟಿ ರೂ ಲಾಭ ಹಾಗೂ ಆಸ್ತಿ ಸಂಪಾದಿಸಲು ಯಂಗ್ ಇಂಡಿಯಾ ಲಿ. ವಾಮಮಾರ್ಗ ಅನುಸರಿಸಿದೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದ್ದು, ಜಾರಿ ನಿರ್ದೇಶನಾಲಯವು ರಾಹುಲ್​ ಮತ್ತು ಸೋನಿಯಾ ಅವರಿಗೆ ನೋಟಿಸ್​ ಜಾರಿ ಮಾಡಿ ಖುದ್ದು ಹಾಜರಿಗೆ ಆದೇಶಿಸಿದೆ. ಇದರ ಬೆನ್ನಲ್ಲೇ ಸೋನಿಯಾ ಗಾಂಧಿ ಅವರಿಗೆ ಕರೊನಾ ಕಾಣಿಸಿಕೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net