

ವಿಜಯವಾಣಿ ಸುದ್ದಿಜಾಲ ಕಾಸರಗೋಡು
ಅಕ್ರಮ ಮರಳು ಸಾಗಾಟದ ವಿರುದ್ಧ ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಖುದ್ದು ಕಾರ್ಯಾಚರಣೆಗಿಳಿದು ಹಲವು ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಲಾರಿ ಚಾಲಕ ಯು.ಅಬ್ದುಲ್ ಖಾದರ್ ಎಂಬಾತನನ್ನು ಬಂಧಿಸಿದ್ದಾರೆ.
ಕಯ್ಯರ್ ಗ್ರೂಪ್ ಕುಡಾಲ ಮೇರ್ಕಳ ಗ್ರಾಮದ ಚೇವಾರ್ ರಸ್ತೆಯಲ್ಲಿ ಮರಳು ವಶಪಡಿಸಿಕೊಳ್ಳಲಾಗಿದೆ. ಕೆಂಪುಕಲ್ಲು ಅಕ್ರಮ ಗಣಿಗಾರಿಕೆ ಮತ್ತು ಅಕ್ರಮ ಮರಳು ಸಾಗಾಣಿಕೆ ತಡೆಯಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕೈಗೊಳ್ಳಲಾಗುತ್ತಿರುವ ಕಟ್ಟುನಿಟ್ಟಿನ ಕ್ರಮದ ಅಂಗವಾಗಿ ಕಾರ್ಯಾಚರಣೆ ನಡೆಸಲಾಗಿದೆ.
ಮಂಜೇಶ್ವರ ತಾಲೂಕಿನಲ್ಲಿ ಶನಿವಾರ ಆರು ವಾಹನಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಜಿಲ್ಲೆಯಲ್ಲಿ ಎಲ್ಲೆಂದರಲ್ಲಿ ಮರಳು ಅಕ್ರಮ ಸಾಗಣೆ, ಕೆಂಪುಕಲ್ಲು ಗಣಿಗಾರಿಕೆ ಸೇರಿದಂತೆ ಕಾನೂನುಬಾಹಿರ ಚಟುವಟಿಕೆ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.