

ಕೋಲಾರ : 9ನೇ ತರಗತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಆ.23ರಿಂದ ಭೌತಿಕ ತರಗತಿ ಆರಂಭಿಸಲು ಸರ್ಕಾರ ಸಮ್ಮತಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಪೂರ್ಣಗೊಳಿಸಿದೆ.
ಕರೊನಾ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 9, 10 ಮತ್ತು ಪಿಯು ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಆರಂಭವಾಗಲಿದೆ. ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಶೇ. 2ಕ್ಕಿಂತ ಕಡಿಮೆ ಇರುವುದರಿಂದ ಸರ್ಕಾರದ ಮಾರ್ಗಸೂಚಿಯನ್ವಯ ತರಗತಿ ನಡೆಯಲಿದೆ.
ಜಿಲ್ಲೆಯಲ್ಲಿ 126 ಸರ್ಕಾರಿ, 60 ಅನುದಾನಿತ ಹಾಗೂ 185 ಅನುದಾನ ರಹಿತ ಪ್ರೌಢಶಾಲೆಗಳಿವೆ. ಮುರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, 30 ವಸತಿ ಶಾಲೆಗಳು ಸೇರಿ ಒಟ್ಟು 401 ಶಾಲೆಗಳಿವೆ. ಈ ಪೈಕಿ 9ನೇ ತರಗತಿಯಲ್ಲಿ 22,584 ಹಾಗೂ 10ನೇ ತರಗತಿಯಲ್ಲಿ 21,195 ಸೇರಿ ಒಟ್ಟು 43,779 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ.
ಸರ್ಕಾರದ ಮಾರ್ಗಸೂಚಿಯನ್ವಯ ಕೊಠಡಿಗಳನ್ನು ಸ್ವಚ್ಛಗೊಳಿಸಿ ಸ್ಯಾನಿಟೈಸ್ ಮಾಡಲಾಗಿದೆ. ಗ್ರಾಮೀಣ ಶಾಲೆಗಳಲ್ಲಿ ಗ್ರಾಪಂ ನೆರವಿನಿಂದ ಸ್ಯಾನಿಟೈಸ್ ಮಾಡಲು ಕ್ರಮ ಕೈಗೊಳ್ಳಲಾಗಿತ್ತು. ಶೌಚಗೃಹ ಸ್ವಚ್ಛತೆ ಕಾಯ್ದುಕೊಳ್ಳಲು ಸೂಚಿಸಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ. ಶಾಲೆಗಳಲ್ಲಿ ಎಲ್ಲ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಇಒ ರಾಮಕೃಷ್ಣಪ್ಪ ತಿಳಿಸಿದ್ದಾರೆ.
ಸರ್ಕಾರ ಸೂಚಿಸಿರುವ ಎಸ್‌ಒಪಿ ಅನ್ವಯ ಶಾಲಾರಂಭಕ್ಕೆ ಸಿದ್ಧತೆ ಕೈಗೊಳ್ಳಲಾಗಿದ್ದು, ಪ್ರತಿ ಕೊಠಡಿಯಲ್ಲಿ ಎಷ್ಟು ಮಕ್ಕಳನ್ನು ಕುಳ್ಳಿರಿಸಬೇಕೆಂದು ಶಿಕ್ಷಕರಿಗೆ ಮಾರ್ಗದರ್ಶನ ನೀಡಲಾಗಿದೆ. ವಿದ್ಯಾರ್ಥಿಗಳು ಪಾಲಕರಿಂದ ಒಪ್ಪಿಗೆ ಪತ್ರ ತರಬೇಕು, ಶೀತ, ಜ್ವರ ಇನ್ನಿತರ ಅನಾರೋಗ್ಯ ಲಕ್ಷಣವಿರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು. ಎಸ್.ಜಿ.ನಾಗೇಶ್, ಡಿಡಿಪಿಐ ಕೋಲಾರ