ಅನ್ಯ ಉದ್ದೇಶಕ್ಕೆ ಎಸ್‌ಸಿಪಿ-ಟಿಎಸ್‌ಪಿ ಅನುದಾನ ಬೇಡ

dss
ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ಅನ್ಯ ಯೋಜನೆಗೆ ಬಳಸದಂತೆ ಒತ್ತಾಯಿಸಿ ಡಿಎಸ್‌ಎಸ್ ನೇತೃತ್ವದಲ್ಲಿ ಡಿಸಿ ಕಚೇರಿ ಎದುರು ಪ್ರತಿಭಟಿಸಲಾಯಿತು. ಸತ್ಯ ಭದ್ರಾವತಿ, ಗುರುರಾಜ್, ಚಿನ್ನಯ್ಯ, ಮಣಿ, ಪಿ.ಏಳುಮಲೈ ಇತರರಿದ್ದರು.
Published on

ಶಿವಮೊಗ್ಗ: ದಲಿತರ ಅಭಿವೃದ್ಧಿಗೆ ಬಳಕೆಯಾಗಬೇಕಿದ್ದ ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳು ಸೇರಿ ಅನ್ಯ ಉದ್ದೇಶಕ್ಕೆ ಬಳಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ದಲಿತ ಮುಖಂಡರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಡಿಎಸ್‌ಎಸ್ ನೇತೃತ್ವದಲ್ಲಿ ಪ್ರತಿಭಟಿಸಿದರು.

ಪರಿಶಿಷ್ಟ ಜಾತಿ ಹಾಗೂ ವರ್ಗದವರ ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳಿಗೆ ಬಳಕೆಯಾಗಬೇಕಾದ ಹಣ ಈಗ ಅನ್ಯರ ಪಾಲಾಗುತ್ತಿದೆ. ಸರ್ಕಾರ ಕೈಗೊಂಡ ತೀರ್ಮಾನದಿಂದ ದಲಿತರು ನಷ್ಟ ಅನುಭವಿಸಬೇಕಿದೆ. ಅವರ ಮೂಲಹಕ್ಕನ್ನು ಸರ್ಕಾರ ಮೊಟಕುಗೊಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೆ ಬಿಜೆಪಿ ಸರ್ಕಾರ ದಲಿತ ವಿರೋಧಿ ಮನಸ್ಥಿತಿ ತೋರಿದ ಪರಿಣಾಮ ವಿಧಾನಸಭೆ ಚುನಾವಣೆಯಲ್ಲಿ ದಲಿತರು ಕಾಂಗ್ರೆಸ್ ಬೆಂಬಲಕ್ಕೆ ನಿಂತರು. ಈ ಕಾರಣದಿಂದ ಕಾಂಗ್ರೆಸ್ ಅಧಿಕಾರ ಹಿಡಿಯಲು ಸಾಧ್ಯವಾಯಿತು. ಈಗ ಕಾಂಗ್ರೆಸ್ ಕೂಡ ಬಿಜೆಪಿ ಹಾದಿಯಲ್ಲೇ ಸಾಗುತ್ತಿದೆ. ಪರಿಶಿಷ್ಟರ ಹಣ ಪರಿಶಿಷ್ಟರಿಗೆ ಮಾತ್ರ ಮೀಸಲಿಡಬೇಕು ಎಂದು ಆಗ್ರಹಿಸಿದರು.

ಎಸ್‌ಸಿಪಿ-ಟಿಎಸ್‌ಪಿ 2103ರ ಕಾಯ್ದೆಯ ಕಲಂ 7ಸಿ ಅನ್ನು ಕೂಡಲೇ ರದ್ದುಗೊಳಿಸಬೇಕು. ವಿವಿಧ ಇಲಾಖೆ ಮೂಲಕ ಅನ್ಯ ಯೋಜನೆಗಳಿಗೆ ಅನುದಾನ ಬಳಕೆ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರದ 28 ಇಲಾಖೆಗಳ ಬ್ಯಾಕ್‌ಲಾಗ್ ಹುದ್ದೆಗಳ ಕುರಿತು ಅಂಕಿ ಅಂಶ ನೀಡದಿರುವ ಇಲಾಖೆ ಮುಖ್ಯಸ್ಥರ ಮೇಲೆ ಪರಿಶಿಷ್ಟ ಜಾತಿ, ಪಂಗಡದ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಸುಪ್ರೀಂಕೋರ್ಟ್ ನಿರ್ದೇಶನದಂತೆ ದತ್ತಾಂಶ ಪಡೆದ ತಕ್ಷಣವೇ 101 ಪರಿಶಿಷ್ಟ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚಿನ್ನಯ್ಯ, ರಾಜ್ಯ ವಿಭಾಗೀಯ ಸಂಚಾಲಕ ಗುರುರಾಜ್, ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಜಿಲ್ಲಾ ಸಂಘಟನಾ ಸಂಚಾಲಕ ಕೆ.ಎ.ರಾಜಕುಮಾರ್, ಜಿಲ್ಲಾ ಸಮಿತಿ ಸದಸ್ಯರಾದ ಪಿ.ಏಳುಮಲೈ, ಮಣಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net