ಪರಿಶಿಷ್ಟರಿಗೆ ಪ್ರತ್ಯೇಕ ಸಚಿವಾಲಯ; ಶೀಘ್ರ ಸರ್ಕಾರ ನಿರ್ಧಾರ

Valmiki Sri
Published on

ಬೆಂಗಳೂರು: ಪರಿಶಿಷ್ಟರಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ರಾಜ್ಯ ಸರ್ಕಾರ ಶೀಘ್ರ ನಿರ್ಧಾರ ಪ್ರಕಟಿಸಲಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ. ನಾಗೇಂದ್ರ ತಿಳಿಸಿದರು.

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ವಿವಿಧ ಸಂಘ-ಸಂಸ್ಥೆಗಳೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಪರಿಶಿಷ್ಟರಿಗೆ ಪ್ರತ್ಯೇಕ ಸಚಿವಾಲಯವನ್ನು ಹಿಂದಿನ ಸರ್ಕಾರ ಮಾಡಲು ಹೊರಟಿತ್ತು. ಆದರೆ, ಮಾಡಲಿಲ್ಲ. ನಾವು ಈಗ ಅದನ್ನು ಮಾಡುತ್ತೇವೆ. ಬಹುಬೇಗ ಸಚಿವಾಲಯ ರಚನೆಗೆ ಸಿಎಂ ನಿರ್ಧರಿಸುತ್ತಾರೆ ಎಂದು ಹೇಳಿದರು.

ವಾಲ್ಮೀಕಿ ಸಮುದಾಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳಿವೆ. ಅದರಲ್ಲಿ ಪ್ರಮುಖವಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡುವುದೂ ಒಂದಾಗಿದ್ದು, ಅದರ ಬಗ್ಗೆ ಮುಖ್ಯಮಂತ್ರಿಗಳೂ ಸಕಾರಾತ್ಮಕವಾಗಿದ್ದಾರೆ. ಸರ್ಕಾರಕ್ಕೂ ಬದ್ಧತೆ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮತ್ತೊಮ್ಮೆ ಚರ್ಚಿಸಿ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ವಾಲ್ಮೀಕಿ ಜಯಂತಿ ಅನುದಾನ ಹೆಚ್ಚಳ

ಅ. 28ರಂದು ರಾಜ್ಯಾದ್ಯಂತ ವಾಲ್ಮೀಕಿ ಜಯಂತಿ ಆಯೋಜಿಸಲಾಗುತ್ತದೆ. ಜಿಲ್ಲೆ ಹಾಗೂ ತಾಲೂಕು ಮಟ್ಟದ ಕಾರ್ಯಕ್ರಮಗಳಿಗೆ ಈವರೆಗೆ ನೀಡಲಾಗುತ್ತಿದ್ದ ಅನುದಾನ ಹೆಚ್ಚಿಸಲಾಗುವುದು. ಪ್ರತಿ ತಾಲೂಕು, ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜನೆಗೆ ಕನಿಷ್ಠ 10 ಸಾವಿರ ರೂ. ಹೆಚ್ಚಿನ ಅನುದಾನ ನೀಡಲಾಗುತ್ತದೆ ಎಂದರು.

ಪ್ರಶಸ್ತಿಗೆ ಆಯ್ಕೆ ಸಮಿತಿ ರಚನೆ

ವಾಲ್ಮೀಕಿ ಸಮುದಾಯದ ಏಳಿಗೆಗಾಗಿ ಶ್ರಮಿಸಿದವರಿಗೆ ರಾಜ್ಯಮಟ್ಟದ ವಾಲ್ಮೀಕಿ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿ ಪುರಸ್ಕೃತರ ಆಯ್ಕೆಗಾಗಿ 5ರಿಂದ 10 ಮಂದಿ ಸದಸ್ಯರಿರುವ ಆಯ್ಕೆ ಸಮಿತಿ ರಚಿಸಲಾಗುವುದು. ಸಮಿತಿ ಆಯ್ಕೆ ಮಾಡುವವರಿಗೆ ಬೆಂಗಳೂರಿನಲ್ಲಿ ಆಯೋಜಿಸಲಾಗುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಶಾಸಕಿ ಕರೆಮ್ಮ, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net