

ಬೆಂಗಳೂರು: ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ ಮಾಡಬೇಕು ಎಂದು ಆಲೋಚನೆ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ವಿಧಾನಸೌಧದಲ್ಲಿ ಕರಾವಳಿ ಅಭಿವೃದ್ಧಿ ಕುರಿತು ಸಚಿವರು, ಶಾಸಕರು ಜತೆಗೆ ಶುಕ್ರವಾರ ಸಭೆ ನಡೆಸಿದ ಅವರು ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಕರಾವಳಿ ಭಾಗದ ಅಭಿವೃದ್ಧಿಗೆ ಮೊದಲ ಬಾರಿ ಸಭೆ ನಡೆಸಿ ಮಾಹಿತಿ ಪಡೆದುಕೊಳ್ಳಲಾಗಿದೆ ಎಂದರು.
ಎರಡನೇ ಸಭೆಯನ್ನು ಮಂಗಳೂರಿನಲ್ಲಿ ನಡೆಸಲಾಗುವುದು. ಮುಂದಿನ ಸಭೆಗೆ ಯಾರನ್ನು ಆಹ್ವಾನ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ ಎಂದರು.
ಈ ಸಭೆಯಲ್ಲಿ ಬಂಡವಾಳ ಹೂಡಿಕೆದಾರರು, ಕೇಂದ್ರ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಕರೆಯಲಾಗುತ್ತದೆ. ಕರಾವಳಿ ಭಾಗಕ್ಕೆ ಹೊಸ ರೂಪ ನೀಡಲಾಗುತ್ತದೆ ಎಂದು ತಿಳಿಸಿದರು.
ಕರಾವಳಿ ಭಾಗದ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಸಚಿವರು ಜತೆಗೆ ನಡೆದ ಸಭೆಯಲ್ಲಿ ಪರಿಹಾರೋಪಾಯಗಳ ಬಗ್ಗೆ ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಅಧಿಕಾರಿಗಳೂ ಈ ಸಭೆಯಲ್ಲಿ ಹಾಜರಿದ್ದರು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣಕನ್ನಡ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ಅಭಿವೃದ್ಧಿಗೆ ಪೂರಕವಾದ ವಾತಾವರಣವಿದೆ. ಬ್ರ್ಯಾಂಡ್ ಕರಾವಳಿ ಮುಖೇನ ಆಭಿವೃದ್ಧಿಗೆ ಹೊಸ ಆಯಾಮ ನೀಡಲು ಸಾಧ್ಯವಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಸಭೆಯಲ್ಲಿ ಮಾತನಾಡಿದ ಅವರು, ಉಡುಪಿ, ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಸಾಕಷ್ಟು ದೇವಾಲಯಗಳಿವೆ. ಇವು ಪ್ರವಾಸೋದ್ಯಮಕ್ಕೆ ಒತ್ತಾಸೆ ನೀಡುತ್ತವೆ, ಹೊರ ರಾಜ್ಯಗಳಲ್ಲಿರುವ ಕರಾವಳಿ ಮೂಲದ ಉದ್ಯಮಿಗಳು ಈ ಭಾಗದಲ್ಲಿ ಹೂಡಿದರೆ ಮುಂದಿನ 2-3 ವರ್ಷಗಳಲ್ಲಿ ಸಮಗ್ರ ಅಭಿವೃದ್ಧಿ ಸಾಧ್ಯವಿದೆ ಎಂಬ ವಿಶ್ವಾಸವನ್ನು ಹೆಬ್ಬಾಳ್ಕರ್ ವ್ಯಕ್ತಪಡಿಸಿದರು.
ವಿಧಾನಸೌಧದಲ್ಲಿ ಕರಾವಳಿ ಭಾಗದ ಅಭಿವೃದ್ಧಿ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಭೆ ನಡೆಯಿತು. ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಸಚಿವರಾದ ಎಚ್.ಕೆ.ಪಾಟೀಲ, ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಕರ್, ಮಂಕಾಳ ವೈದ್ಯ, ಶಾಸಕರು, ಅಧಿಕಾರಿಗಳು ಇದ್ದರು.