

ಚಿಕ್ಕಬಳ್ಳಾಪುರ: ಹೆಚ್ಚಿನ ಪ್ರಕರಣಗಳ ಇತ್ಯರ್ಥದ ಗುರಿಯೊಂದಿಗೆ ಜಿಲ್ಲೆಯಲ್ಲಿ ಸೆ.14 ರಂದು ರಾಷ್ಟ್ರೀಯ ಮೆಗಾ ಅದಾಲತ್ ಕೈಗೊಳ್ಳಲಾಗಿದೆ.
ಜಿಲ್ಲೆಯ ವಿವಿಧ ಹಂತದ ನ್ಯಾಯಾಲಯಗಳಲ್ಲಿ ಬಾಕಿ ಇರುವುದರ ಪೈಕಿ ಇತ್ಯರ್ಥಪಡಿಸಲು ಅವಕಾಶವಿರುವ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ವಕೀಲರು ಮತ್ತು ಕಕ್ಷಿದಾರರ ಪರಸ್ಪರ ಸಹಕಾರದೊಂದಿಗೆ ರಾಜಿ ಮೂಲಕ ಇತ್ಯರ್ಥ ಪಡಿಸಲಾಗುತ್ತಿದ್ದು, ಸಾರ್ವಜನಿಕರು ಅದಾಲತ್‌ನ ಪ್ರಯೋಜನ ಪಡೆದುಕೊಳ್ಳಬೇಕೆಂದು ಚಿಕ್ಕಬಳ್ಳಾಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಮತ್ತು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶೆ ನೇರಳೆ ವೀರಭದ್ರಯ್ಯ ಭವಾನಿ ಮನವಿ ಮಾಡಿದ್ದಾರೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ನಿರಂತರವಾಗಿ ರಾಜಿ ಪಂಚಾಯಿತಿ ಮೂಲಕ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತಿದೆ. ಇದರ ಜತೆಗೆ ಕಕ್ಷಿದಾರರ ಅನುಕೂಲಕ್ಕಾಗಿ ರಾಷ್ಟ್ರೀಯ ಮೆಗಾ ಲೋಕ ಅದಾಲತ್ ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಲಾಗುತ್ತಿದೆ. ಲೋಕ ಅದಾಲತ್‌ನಲ್ಲಿ ಪ್ರಕರಣಗಳನ್ನು ಸ್ವಯಂಪ್ರೇರಿತರಾಗಿ ಇತ್ಯರ್ಥಪಡಿಸಿಕೊಳ್ಳುವುದರಿಂದ ಎರಡೂ ಕಡೆಯವರಿಗೂ ಒಪ್ಪಿಗೆಯಾಗುವಂತೆ ಪ್ರಕರಣ ತೀರ್ಮಾನವಾಗುವುದರಿಂದ ವಿವಾದವು ಸುಖಾಂತ್ಯಗೊಳ್ಳುತ್ತದೆ. ಇನ್ನೂ ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನೂ ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು. ಒಂದು ವೇಳೆ ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಸಂರ್ಪೂವಾಗಿ ಮರುಪಾವತಿ ಮಾಡಲಾಗುತ್ತದೆ. ಸಂಧಾನಕಾರರು ಸೂಚಿಸುವ ಪರಿಹಾರ ಸಮ್ಮತಿಯಾದಲ್ಲಿ ಮಾತ್ರ ಪ್ರಕರಣ ಇತ್ಯರ್ಥವಾಗುತ್ತದೆ. ಇದರಿಂದ ಕಡಿಮೆ ಖರ್ಚು, ಸಮಯದ ಉಳಿತಾಯ, ವಿವಾದ ಅಂತ್ಯಗೊಂಡು ಉತ್ತಮ ಬಾಂಧವ್ಯ ವೃದ್ಧಿ ಸೇರಿದಂತೆ ನಾನಾ ರೀತಿಯ ಲಾಭಗಳಾಗುತ್ತವೆ.
*ಯಾವ ಪ್ರಕರಣಗಳು ಇತ್ಯರ್ಥ?*
ಜಿಲ್ಲಾ ನ್ಯಾಯಾಲಯವೂ ಸೇರಿದಂತೆ ವಿವಿಧ ಹಂತದ ನ್ಯಾಯಾಲಯಗಳಲ್ಲಿ ರಾಜಿಯಾಗಬಲ್ಲ ಪ್ರಕರಣಗಳು, ಬ್ಯಾಂಕ್ ವಸೂಲಾತಿ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವುದು, ಕೈಗಾರಿಕಾ ಕಾರ್ಮಿಕರ ವೇತನ, ಜಿಲ್ಲಾ ಗ್ರಾಹಕರ ಪರಿಹಾರ ಆಯೋಗ, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರ ಮತ್ತು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದಲ್ಲಿನ ಪ್ರಕರಣಗಳು, ಚೆಕ್ಕು ಅಮಾನ್ಯ, ಸಾಲ ವಸೂಲಾತಿ ಸೇರಿದಂತೆ ನಿಗದಿತ ಪ್ರಕರಣಗಳನ್ನೂ ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗುತ್ತದೆ.
.