ಕೆರೆ ಒತ್ತುವರಿ ತೆರವಿಗೆ ಗಂಭೀರ ಗಮನ

Siddaramaiah
Published on

ಬೆಂಗಳೂರು: ರಾಜ್ಯದಲ್ಲಿ ಕೆರೆ ಒತ್ತುವರಿ ತೆರವು ಕಾರ್ಯ ಬಾಕಿಯಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವುದು, ಮಳೆಗಾಲದ ಒಳಗಾಗಿ ಕೆರೆ ಒತ್ತುವರಿಯನ್ನು ತೆರವುಗೊಳಿಸಿ, ಕೆರೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆ ನಿರ್ಣಯಿಸಿತು.

ರಾಜ್ಯದಲ್ಲಿ ಒಟ್ಟು 40,998 ಕೆರೆಗಳಿದ್ದು, ಇವುಗಳ ಪೈಕಿ ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ 26,365ಕೆರೆಗಳು, ಸಣ್ಣ ನೀರಾವರಿಯಲ್ಲಿ 3,247, ಬಿಬಿಎಂಪಿ ವ್ಯಾಪ್ತಿಯಲ್ಲಿ  117 ಕೆರೆಗಳಿವೆ. ರಾಜ್ಯದಲ್ಲಿ 30 ಸಾವಿರ ಕೆರೆಗಳ ಸರ್ವೇ ಕಾರ್ಯವನ್ನು ಕಂದಾಯ ಇಲಾಖೆ ಈಗಾಗಲೇ ಪೂರ್ಣಗೊಳಿಸಿದೆ. ಉಳಿದಿರುವ 10,754 ಕೆರೆಗಳ ಸಮೀಕ್ಷೆ ಕಾರ್ಯವನ್ನು ಆರು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಸಿಎಂ ಸೂಚನೆ ನೀಡಿದರು.

ಕೆರೆಗಳ ಸಂರಕ್ಷಣೆ ಕಾರ್ಯವನ್ನು ನರೇಗಾ ಅಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಕೈಗೆತ್ತಿಕೊಳ್ಳಬೇಕು. ನಗರ ಪ್ರದೇಶದ ಕೆರೆಗಳು ಮಾತ್ರವಲ್ಲದೆ, ರಾಜ್ಯದ ಎಲ್ಲಾ ಕೆರೆಗಳ ಮಾಲಿನ್ಯದ ಮಟ್ಟವನ್ನು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಪರಿಶೀಲಿಸಿ ನಿಯಮಿತವಾಗಿ ವರದಿ ಸಲ್ಲಿಸಬೇಕು ಎಂದು ತಾಕೀತು ಮಾಡಿದರು.

ರಾಜ್ಯದಲ್ಲಿ ಸಣ್ಣ ನೀರಾವರಿ ಇಲಾಖೆಯ 8.92 ಲಕ್ಷ ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವಿದೆ. ಇದರಲ್ಲಿ 421 ಏತ ನೀರಾವರಿ ಯೋಜನೆಗಳ 94315 ಹೆಕ್ಟೇರ್, 3778 ಕೆರೆಗಳ 437086 ಹೆಕ್ಟೇರ್ ಅಚ್ಚುಕಟ್ಟು ಸೇರಿದೆ. ಪ್ರಸ್ತುತ ವರ್ಷ ಇಲಾಖೆಗೆ ರೂ.1577 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಇದುವರೆಗೆ ರೂ.1468.17 ಕೋಟಿ ವೆಚ್ಚ ಮಾಡಲಾಗಿದೆ. ಪ್ರಸ್ತುತ ವರ್ಷ 9449 ಹೆಕ್ಟೇರ್ ಹೊಸ ಅಚ್ಚುಕಟ್ಟು ಸೃಷ್ಟಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡರು.

ಪ್ರಸ್ತುತ ಹಣಕಾಸು ಸಾಲಿನಲ್ಲಿ ಒಟ್ಟು ರೂ.1112.59 ಕೋಟಿ ವೆಚ್ಚದಲ್ಲಿ 17 ಕಾಮಗಾರಿಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದ್ದು, ಕಾಮಗಾರಿಯನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಇದರಿಂದಾಗಿ 5989.64 ಹೆಕ್ಟೇರ್ ಅಚ್ಚುಕಟ್ಟು ಸೃಜನೆಯಾಗಲಿದೆ ಎಂದು ವಿವರಿಸಿದರು.

ಕೆಸಿ ವ್ಯಾಲಿ 1 ನೇ ಹಂತದಲ್ಲಿ ರೂ.1342 ಕೋಟಿ ವೆಚ್ಚದಲ್ಲಿ 145 ಕೆರೆಗಳನ್ನು ತುಂಬಿಸುವ ಯೋಜನೆ ಪೂರ್ಣಗೊಳಿಸಲಾಗಿದೆ. ಯೋಜನೆಯಡಿ ಬಿಡಬ್ಲುಎಸ್‌ಎಸ್‌ಬಿ 440 ಎಂಎಲ್‌ಡಿ ಸಂಸ್ಕರಿಸಿದ ನೀರನ್ನು ಒದಗಿಸಬೇಕಾಗಿದ್ದು, ಪ್ರಸ್ತುತ 265 ಎಂಎಲ್‌ಡಿ ಒದಗಿಸುತ್ತಿದೆ. ಪೂರ್ಣ ಪ್ರಮಾಣದ ನೀರು ಪೂರೈಕೆಗೆ ಅಗತ್ಯವಿರುವ ಸಂಸ್ಕರಣಾ ಘಟಕಗಳ ನಿರ್ಮಾಣ ಕಾರ್ಯವನ್ನು ಈ ವರ್ಷದ ಅಂತ್ಯದ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಇದೇ ವೇಳೆ ಸಿಎಂ ನಿರ್ದೇಶನ ನೀಡಿದರು.

ಕೆಸಿ ವ್ಯಾಲಿ 2ನೇ ಹಂತದಲ್ಲಿ ರೂ.446 ಕೋಟಿ ವೆಚ್ಚದಲ್ಲಿ 272 ಕೆರೆಗಳನ್ನು ತುಂಬಿಸುವ ಕಾಮಗಾರಿ ಪ್ರಗತಿಯಲ್ಲಿದ್ದು, ಇದುವರೆಗೆ 32 ಕೆರೆಗಳನ್ನು ತುಂಬಿಸಲಾಗಿದೆ. ಪ್ರಸ್ತುತ ಒಟ್ಟು 1300 ಎಂಎಲ್‌ಡಿ ನೀರನ್ನು ಬೆಂಗಳೂರು ನಗರದಲ್ಲಿ ಸಂಸ್ಕರಿಸಲಾಗುತ್ತಿದೆ. ಹೊಸದಾಗಿ 583 ಎಂಎಲ್‌ಡಿ ನೀರು ಸಂಸ್ಕರಿಸಲು ಪೂರಕವಾಗಿ ಹೊಸ ಎಸ್‌ಟಿಪಿಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲು ಹಣಕಾಸು ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಕೆಸಿ ವ್ಯಾಲಿ, ಎಚ್‌ಎನ್ ವ್ಯಾಲಿ, ವೃಷಭಾವತಿ, ಹೊಸಕೋಟೆ, ಆನೆಕಲ್ ಯೋಜನೆಗಳಡಿ ಸಣ್ಣ ನೀರಾವರಿ ಇಲಾಖೆ ಕೆರೆಗಳನ್ನು ತುಂಬಿಸಲು ಅಗತ್ಯವಿರುವ ಸಂಪೂರ್ಣ ಪ್ರಮಾಣದ ನೀರನ್ನು ಒದಗಿಸಲು ಬಿಡಬ್ಲುಎಸ್‌ಎಸ್‌ಬಿ ಕ್ರಮ ಕೈಗೊಳ್ಳಬೇಕು. ಇದಕ್ಕೆ ಅಗತ್ಯವಿರುವ ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net