

ನವದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ಭಾರೀ ಗದ್ದಲವನ್ನು ಉಂಟು ಮಾಡಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿರುವ ಎಸ್ಐಟಿ ಮಹತ್ವದ ದಾಖಲೆಗಳನ್ನು ಕಲೆಹಾಕಿ ವಿಚಾರಣೆ ನಡೆಸುತ್ತಿದೆ. ಇನ್ನೂ ಇದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಪ್ರತಿಕ್ರಿಯಿಸಿದ್ದು, ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಣೆ ಹೊರಡಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ (NCW) ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಒಂದನ್ನು ಬಹಿರಂಗಪಡಿಸಿದೆ.
ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ರೀತಿ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ 700 ಮಹಿಳೆಯರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಯಾವುದೇ ದೂರು ನೀಡಿಲ್ಲ. ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಪ್ರಕಟಿಸಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಇದಕ್ಕೆ ವಿಶೇಷ ತನಿಖೆ ತಂಡವನ್ನು ಕೂಡ ರಚನೆ ಮಾಡಲಾಗಿದೆ. ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹಾಕಲಾಗಿದೆ. ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆ ದೂರು ನೀಡಿದ್ದಾರೆ. ಸಿವಿಲ್ ಡ್ರೆಸ್ನಲ್ಲಿ ಬಂದಿದ್ದ ಮೂವರು ಬೆದರಿಕೆ ಹಾಕಿದ್ದಾರೆ. ಪೊಲೀಸರು ಎಂದು ಹೇಳಿಕೊಂಡು ಬಂದ ಮೂವರು, ಪ್ರಜ್ವಲ್ ವಿರುದ್ಧ ಸುಳ್ಳು ದೂರು ಕೊಡುವಂತೆ ಒತ್ತಡ ಹೇರಿದ್ದಾರೆ. ಬೇರೆ, ಬೇರೆ ಫೋನ್ ನಂಬರ್ಗಳಿಂದ ನಿರಂತರ ಕರೆ ಮಾಡಲಾಗಿದೆ. ಅಲ್ಲದೇ ದೂರವಾಣಿ ಮೂಲಕವು ಸಹ ಒತ್ತಡ ಹಾಕಲಾಗಿದೆ ಎಂದು ಸಂತ್ರಸ್ತೆ ದೂರಿರುವುದಾಗಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.