

ನವದೆಹಲಿ: ಕೇಂದ್ರ ಸರ್ಕಾರ 79ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆಯ ವಿಶಿಷ್ಠ ಕೊಡುಗೆ ನೀಡಿದ್ದು, ಧಾರವಾಡದ ಇಟ್ಟಿಗಟ್ಟಿಯಲ್ಲಿ ಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ ಪ್ರೖೆವೇಟ್ ಲಿಮಿಟೆಡ್ ಪ್ರಸ್ತಾಪಿಸಿದ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯವನ್ನು ಕೇಂದ್ರ ಸರ್ಕಾರ ಇದೀಗ ಅಧಿಕೃತವಾಗಿ ಗೆಜೆಟ್ನಲ್ಲಿ ಪ್ರಕಟಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಪ್ರಲ್ಹಾದ ಜೋಶಿ, ಉತ್ತರ ಕರ್ನಾಟಕ ಭಾಗದಲ್ಲಿ ಎಲೆಕ್ಟ್ರಾನಿಕ್ಸ್ ಘಟಕಗಳ ಅವಶ್ಯಕತೆ ಮನಗಂಡು ಇಟ್ಟಿಗಟ್ಟಿಯಲ್ಲಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ ಘೋಷಣೆಗೆ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕ ಸಚಿವ ಪಿಯೂಷ್ ಗೋಯಲ್ ಅವರು ನಮ್ಮ ಮನವಿಗೆ ಸ್ಪಂದಿಸಿ ವಿಶೇಷ ಆರ್ಥಿಕ ವಲಯ ಘೋಷಣೆ ಮಾಡಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಒಟ್ಟು 391 ಎಕರೆ ಭೂಮಿ ಹೊಂದಿರುವ ಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ನಲ್ಲಿ ಈಗ 28 ಎಕರೆ ಭೂಮಿಯನ್ನು ಎಲೆಕ್ಟ್ರಾನಿಕ್ಸ್ ವಿಶೇಷ ಆರ್ಥಿಕ ವಲಯ ಎಂದು ಘೋಷಿಸಿದ್ದು, ಉತ್ತರ ಕರ್ನಾಟಕದ ಅದರಲ್ಲಿಯೂ ವಿಶೇಷವಾಗಿ ಹುಬ್ಬಳ್ಳಿ-ಧಾರವಾಡ ಕೈಗಾರಿಕೋದ್ಯಮಿಗಳಿಗೆ ಇದು ಸಂತಸದ ವಿಷಯ ಎಂದು ಜೋಶಿ ಮಾಹಿತಿ ನೀಡಿದ್ದಾರೆ.
ನನ್ನ ಮನವಿಗೆ ಸ್ಪಂದಿಸಿ ಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ ಪ್ರೖೆವೇಟ್ ಲಿಮಿಟೆಡ್ ಪ್ರಸ್ತಾಪಿಸಿದ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯವನ್ನಾಗಿ ಘೋಷಿಸಿದ್ದಕ್ಕೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರಿಗೆ ಹಾಗೂ ಕರ್ನಾಟಕ ಸರ್ಕಾರದ ವಾಣಿಜ್ಯ, ಕೈಗಾರಿಕೆ ಮತ್ತು ಮೂಲಸೌಕರ್ಯ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಹೃದಯಪೂರ್ವಕ ಧನ್ಯವಾದಗಳು ಎಂದು ಜೋಶಿ ತಿಳಿಸಿದ್ದಾರೆ.
ಉತ್ತರ ಕರ್ನಾಟಕ ಭಾಗಕ್ಕೆ ಮುಂಬರುವ ದಿನಗಳಲ್ಲಿ ಹೊಸ ಎಲೆಕ್ಟ್ರಾನಿಕ್ಸ್ ಉದ್ಯಮಗಳು ಬಂದಂತೆ ವಿಶೇಷ ಆರ್ಥಿಕ ವಲಯದ ವಿಸ್ತರಣೆೆ ಮಾಡುವ ಅವಕಾಶವಿದೆ. ಹುಬ್ಬಳ್ಳಿ-ಧಾರವಾಡದ ಕೈಗಾರಿಕಾ ಪ್ರದೇಶದಲ್ಲಿ ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಗೆ ಈ ವಿಶೇಷ ಆರ್ಥಿಕ ವಲಯ ಉತ್ತೇಜನ ನೀಡಲಿದೆ. ಕೇಂದ್ರ ಸರ್ಕಾರದ ಈ ಕ್ರಮ ಹುಬ್ಬಳ್ಳಿಯನ್ನು ಎಲೆಕ್ಟ್ರಾನಿಕ್ಸ್ ಹಾಗೂ ಜಾಗತಿಕ ಎಲೆಕ್ಟ್ರಾನಿಕ್ಸ್ ಉತ್ಪಾದನೆಯ ಶಕ್ತಿ ಕೇಂದ್ರವಾಗಿ ಪರಿವರ್ತಿಸುವ ನಿರ್ಣಾಯಕ ಹೆಜ್ಜೆಯಾಗಲಿದೆ. ಹುಬ್ಬಳ್ಳಿ-ಧಾರವಾಡ ಕೌಶಲ್ಯ ಪೂರ್ಣ ಕಾರ್ವಿುಕರ ತಂಡದೊಂದಿಗೆ ತ್ವರಿತ ಕೈಗಾರಿಕಾ ಬೆಳವಣಿಗೆ, ಗುಣಮಟ್ಟದ ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಪ್ರಗತಿಗೆ ಸಿದ್ಧವಾಗಿದೆ ಎಂದು ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.