

ನವದೆಹಲಿ: ಕೇಂದ್ರದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೆಹಲಿ ಶಾಹೀನ್ ಬಾಗ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಖಂಡಿಸಲು ಹೋಗಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿವಾದ ಸೃಷ್ಟಿಸಿದ್ದಾರೆ.
ಟ್ವೀಟ್ ಮಾಡಿರುವ ಅವರು, ಇಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಶಾಹೀನ್ ಬಾಗ್ ಚಳವಳಿ ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಇಲ್ಲಿ ಆತ್ಮಾಹುತಿ ಬಾಂಬರ್ಗಳು ಹುಟ್ಟಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಮೂಲಕ ಶಾಹೀನ್ಬಾಗ್ ಸೂಸೈಡ್ ಬಾಂಬರ್ಗಳ ತಳಿ ಸಂವರ್ಧನಾ ಕೇಂದ್ರವಾಗುತ್ತಿದೆ ಎಂದು ವಿವಾದ ಸೃಷ್ಟಿಸಿದ್ದಾರೆ.
ಕೇಂದ್ರ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವರಾದ ಗಿರಿರಾಜ್ ಸಿಂಗ್ ಅವರು ಮೊದಲಿನಿಂದಲೂ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಕುಖ್ಯಾತರಾದವರು.
ಶಾಹೀನ್ ಬಾಗ್ ಪ್ರತಿಭಟನೆಯನ್ನು ಈಗಾಗಲೇ ಹಲವು ಬಿಜೆಪಿ ನಾಯಕರು ವಿರೋಧಿಸಿದ್ದಾರೆ. ಈ ಪ್ರತಿಭಟನೆಗೆ ದೆಹಲಿಯ ಅರವಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರ ಬೆಂಬಲ ನೀಡುತ್ತಿದೆ ಎಂದು ಕೇಂದ್ರ ಸಚಿವ ಅಮಿತ್ ಷಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇತರರು ಆರೋಪ ಮಾಡಿದ್ದಾರೆ.
ಡಿ.18ರಿಂದಲೂ ಸುಮಾರು 100 ಜನ ದಕ್ಷಿಣ ದೆಹಲಿಯ ಶಾಹೀನ್ ಬಾಗ್ನಲ್ಲಿ ಸಿಎಎ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. (ಏಜೆನ್ಸೀಸ್)