20ರೊಳಗೆ ಶರಾವತಿ ಸಂತ್ರಸ್ತರ ಸಮಗ್ರ ವರದಿ

dc dr.r.selwamani
Published on

ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು ಡಿ.20ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಡಳಿತದಿಂದ ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದೆ. ಜತೆಗೆ ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಗಳಿಂದ ಮಾಹಿತಿ ಪಡೆದು ಸರ್ಕಾರದ ಸೂಚನೆಯಂತೆ ಶರಾವತಿ ಸಂತ್ರಸ್ತರ ಸಮಸ್ಯೆಗಳ ಕುರಿತ ಸಮಗ್ರ ವರದಿ ನೀಡಲಾಗುವುದು. ಈ ಹಿಂದಿನ ಸಮೀಕ್ಷೆಯ ಮಾಹಿತಿ, ಸರ್ವೇ ನಂಬರ್ ಹಾಗೂ ಗ್ರಾಮಾವಾರು ಮಾಹಿತಿ ಸಂಗ್ರಹಿಸಲಾಗಿದೆ ಎಂದು ಹೇಳಿದರು.

ನಗರದಲ್ಲಿ ಆಟೋ ದರ ನಿಗದಿಗೆ ಸಂಬಂಧಿಸಿದಂತೆ ಡಿಸೆಂಬರ್ ಕೊನೆಯವರೆಗೆ ಸಮಯ ನಿಗದಿಪಡಿಸಲಾಗಿದೆ. ಈ ಅವಧಿಯೊಳಗೆ ನಗರದ ಎಲ್ಲ ಆಟೋಗಳ ಚಾಲಕರು ತಮ್ಮ ವಾಹನಕ್ಕೆ ಡಿಜಿಟಲ್ ಮೀಟರ್ ಅಳವಡಿಸಿಕೊಳ್ಳಬೇಕು. ಸಮವಸ್ತ್ರ ಕಡ್ಡಾಯವಾಗಿ ಧರಿಸಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಅನಿವಾರ್ಯವಾಗಲಿದೆ. ರೈಲ್ವೆ ನಿಲ್ದಾಣದಿಂದ ನಗರದ ಬೇರೆ-ಬೇರೆ ಪ್ರದೇಶಗಳಿಗೆ ಹೊರಡುವ ಪ್ರವಾಸಿಗರ ಅನುಕೂಲಕ್ಕಾಗಿ ಸಾರಿಗೆ ನಿಗಮದ ಬಸ್‌ಗಳನ್ನು ನಿಯೋಜಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net