

ಬೆಂಗಳೂರು: ಲೋಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈಗಾಗಲೇ ಅಭ್ಯರ್ಥಿಗಳು ಮತಬೇಟೆಯಲ್ಲಿ ತೊಡಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ಬಿಜೆಪಿ ಈಗಾಗಲೇ 20 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 5 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ. ಟಿಕೆಟ್ ಪಡೆದ ಅಭ್ಯರ್ಥಿಗಳು ಕ್ಷೇತ್ರದ ಮುಖಂಡರನ್ನು ಭೇಟಿಯಾಗಿ ಚುನಾವಣೆಯಲ್ಲಿ ಬೆಂಬಲ ಕೇಳುತ್ತಿದ್ದಾರೆ.
ಇದೀಗ ಮಹತ್ವದ ಬೆಳವಣಿಗೆ ಒಂದರಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರ ಮನೆಗೆ ಭೇಟಿ ನೀಡಿ, ಲೋಕಸಭಾ ಚುನಾವಣೆಗೆ ಬೆಂಬಲ ನೀಡುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ, ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಅವರು ಉಪಸ್ಥಿತರಿದ್ದರು ಎಂದು ಬರೆದುಕೊಂಡಿದ್ದಾರೆ.
ಈ ಹಿಂದೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಕೆಲಸ ಮಾಡಿದ್ದ ಶೋಭಾ ಕರಂದ್ಲಾಜೆ ಈ ಬಾರಿ ಬೆಂಗಳೂರು ಉತ್ತರ ಲೋಕಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಅಂತಿಮವಾಗಿ ವಿಜಯಲಕ್ಷ್ಮೀ ಇವರ ಕೈ ಹಿಡಿಯಲಿದ್ದಾಳಾ ಎಂದು ಕಾದು ನೋಡಬೇಕಿದೆ.