

ಶಿವಮೊಗ್ಗ: ಮುಂದಿನ ಕೆಲವೇ ವರ್ಷಗಳಲ್ಲಿ ಶಿವಮೊಗ್ಗ ಜಾಗತಿಕಮಟ್ಟದಲ್ಲಿ ಇತರ ನಗರಗಳ ಜತೆ ಸ್ಪರ್ಧೆ ಮಾಡುವಂತೆ ಎಲ್ಲ ರೀತಿಯ ಮೂಲಸೌಕರ್ಯ ಕಲ್ಪಿಸಲು ಒತ್ತು ನೀಡಲಾಗುತ್ತಿದೆ ಎಂದು ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕಾಮಗಾರಿಗಳ ಜತೆ ಪರಿಸರಕ್ಕೆ ಯಾವುದೇ ರೀತಿ ಹಾನಿಯಾಗದಂತೆ ಎಚ್ಚರಿಕೆಯಿಂದ ಹೆಜ್ಜೆ ಇಡಲಾಗುತ್ತಿದೆ ಎಂದರು.
ಪ್ರಸಕ್ತ ಸಂಸತ್ ಅಧಿವೇಶನದ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿ ಯೋಜನೆ ಪ್ರಸ್ತಾಪ ಮಾಡಿದ್ದೇನೆ. ರೈಲ್ವೆ, ಹೈವೇ, ಏರ್‌ವೇ, ನೀರಾವರಿ ಯೋಜನೆ ಒಳಗೊಂಡಂತೆ ಕಳೆದ 5 ವರ್ಷಗಳಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವವೇ ನಡೆದಿದೆ ಎಂದು ಹೇಳಿದರು.
ಅಮೃತ ಕಾಲದಲ್ಲಿ ಭಾರತ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಒಂದಾಗಿರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಯಸಿದ್ದಾರೆ. ಸಮಾಜವಾದಿ ನೆಲೆಯ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸಿದ್ಧಾಂತ ಒಪ್ಪಿಕೊಂಡು ಸಂಸದನಾಗಿ ಆಯ್ಕೆ ಮಾಡಿದ್ದಾರೆ ಎಂದರು.