

ಶಿವಮೊಗ್ಗ: ಮೊದಲ ಬಾರಿಗೆ ರಾಜ್ಯ ಸರ್ಕಾರಿ ನೌಕರರ ದಿನವನ್ನು ಏ.21ರಂದು ಆಚರಿಸುತ್ತಿದ್ದು, ಅದೇ ದಿನ ಉತ್ತಮ ಸೇವೆಗಾಗಿ ನೀಡಲಾಗುವ ಸರ್ವೋತ್ತಮ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಡಿಸಿ ಕೆ.ಬಿ.ಶಿವಕುಮಾರ್ ಹೇಳಿದರು.
ಡಿಸಿ ಕಚೇರಿಯಲ್ಲಿ ಸೋಮವಾರ ಸರ್ಕಾರಿ ನೌಕರರ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸರ್ಕಾರದ ಕರೊನಾ ಮಾರ್ಗಸೂಚಿ ಪ್ರಕಾರ ಕುವೆಂಪು ರಂಗಮಂದಿರದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
ಕರೊನಾ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು. ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು ಮತ್ತು ಹ್ಯಾಂಡ್ ಸ್ಯಾನಿಟೈಸರ್ ಬಳಸಬೇಕು. ಶಿಷ್ಠಾಚಾರ ಪ್ರಕಾರ ಆಮಂತ್ರಣ ಪತ್ರ ಸಿದ್ಧಪಡಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕಾರ್ಯಕ್ರಮ ಆಯೋಜನೆ ಕುರಿತು ಸರ್ಕಾರ ಸ್ಪಷ್ಟ ಮಾರ್ಗಸೂಚಿ ಪ್ರಕಟಿಸಲಿದ್ದು, ಅದರಂತೆ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದರು.
ಸವೋತ್ತಮ ಪ್ರಶಸ್ತಿ ಪ್ರದಾನ: ಇದುವರೆಗೆ ಜ.26ರಂದು ಗಣರಾಜ್ಯೋತ್ಸವದಲ್ಲಿ ಸವೋತ್ತಮ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿತ್ತು. ಆದರೆ ಸರ್ಕಾರದ ಸೂಚನೆಯಂತೆ ಸರ್ಕಾರಿ ನೌಕರರ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಜನಸ್ನೇಹಿ ಆಡಳಿತದ ಕುರಿತು ತಜ್ಞ ಸಂಪನ್ಮೂಲ ವ್ಯಕ್ತಿಯಿಂದ ಉಪನ್ಯಾಸ ನಡೆಸಲಾಗುವುದು. ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಅವಕಾಶವಿಲ್ಲ ಎಂದು ಡಿಸಿ ಸ್ಪಷ್ಟಪಡಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ಮೊದಲ ಬಾರಿಗೆ ರಾಜ್ಯಮಟ್ಟದಲ್ಲಿ ಹಾಗೂ ಪ್ರತಿ ಜಿಲ್ಲೆಗಳಲ್ಲಿ ಸರ್ಕಾರಿ ನೌಕರರ ದಿನಾಚರಣೆ ಆಯೋಜಿಸಲಾಗುತ್ತಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಮಟ್ಟದ ಕಾರ್ಯಕ್ರಮ ಉದ್ಘಾಟಿಸುವರು ಎಂದರು.
ಜಿಪಂ ಸಿಇಒ ಎಂ.ಎಲ್.ವೈಶಾಲಿ, ಎಡಿಸಿ ಜಿ.ಅನುರಾಧಾ, ಡಿಡಿಪಿಐ ಎನ್.ಎಂ.ರಮೇಶ್, ಜಿಲ್ಲಾಮಟ್ಟದ ಅಧಿಕಾರಿಗಳು, ನೌಕರರ ಸಂಘದ ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.